ಸೋಮವಾರಪೇಟೆ,ಆ.೨೩: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೊಡಗು ಮತ್ತು ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ಅಗಲಿದ ಸಾಹಿತಿಗಳು ಹಾಗೂ ಸಾಹಿತ್ಯ ಪರಿಷತ್ ಸದಸ್ಯರಿಗೆ ನುಡಿ ನಮನ ಮತ್ತು ಅವರ ನೆನಪಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಇಲ್ಲಿನ ಎಸ್‌ಜೆಎಂ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಹತ್ತು ಹಲವು ಪ್ರತಿಭಾವಂತ ಸಾಹಿತ್ಯಕಾರರು ಹಾಗೂ ಸಾಹಿತ್ಯ ಪರಿಷತ್ ಸದಸ್ಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಭಾಷೆಗೆ ಸಲ್ಲಿಸಿರುವ ಸೇವೆಯನ್ನು ನಾವು ನೆನಪಿಸಿಕೊಳ್ಳಬೇಕಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ. ಸಂಜೀವ ಮಾತನಾಡಿ, ಪ್ರತಿಯೊಬ್ಬರೂ ಜೀವನದಲ್ಲಿ ಸಾಧನೆ ಮಾಡುವ ಗುರಿಯನ್ನಿರಿಸಿಕೊಳ್ಳಬೇಕು. ಸಾಧನೆಗೆ ಶಿಕ್ಷಣ ಪ್ರಮುಖವಾಗಿದ್ದು, ಶೈಕ್ಷಣಿಕ ಸಮಯದಲ್ಲಿ ಹೆಚ್ಚಿನ ಒತ್ತು ನೀಡಿದಲ್ಲಿ ಮಾತ್ರ ನಮ್ಮ ಗುರಿ ಈಡೇರಲು ಸಾಧ್ಯ. ದಿನದಿಂದ ದಿನಕ್ಕೆ ಅರಣ್ಯ ಕಡಿಮೆಯಾಗುತ್ತಿದ್ದು, ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಿದೆ ಎಂದರು.

ಕಾರ್ಯಕ್ರಮಕ್ಕೆ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಎಂ.ಟಿ. ದಾಮೋಧರ್ ಚಾಲನೆ ನೀಡಿದರು. ವೇದಿಕೆಯಲ್ಲಿ ಕಸಾಪ ತಾಲೂಕು ಘಟಕದ ಅಧ್ಯಕ್ಷ ಎಚ್.ಜೆ. ಜವರಪ್ಪ, ಜಿಲ್ಲಾ ಪದಾಧಿಕಾರಿಗಳಾದ ಎಸ್.ಪಿ. ಪ್ರಸನ್ನ, ನಾಗರಾಜ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಎಸ್.ಕೆ. ರಾಣಿ ರವೀಂದ್ರ ಉಪಸ್ಥಿತರಿದ್ದರು. ಇದೇ ಸಂದರ್ಭ ಮೃತರ ಹೆಸರಿನಲ್ಲಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು.