ಬೆಂಗಳೂರು, ಆ. ೨೮: ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಒಳನಾಡು ಸೇರಿದಂತೆ ೧೨ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ತಾ. ೨೯ರಿಂದ ಸೆಪ್ಟೆಂಬರ್ ೧ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.
ಕೊಡಗು ಸೇರಿದಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಹೆಚ್ಚು ಮಳೆ ನಿರೀಕ್ಷಿಸಲಾಗಿದೆ. ತಾ. ೨೯ರಂದು ಆರೆಂಜ್ ಅಲರ್ಟ್ ಹಾಗೂ ತಾ. ೩೦ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.