ಸೋಮವಾರಪೇಟೆ, ಸೆ. ೫: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಜಾನಕಿ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ. ಸಂಜೀವ ಸುವರ್ಣ ಅವರು ಕಾರ್ಯ ಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದ ಪ್ರತಿಯೋರ್ವರನ್ನೂ ಆದರ್ಶ ವ್ಯಕ್ತಿಗಳನ್ನಾಗಿ ಮಾಡಲು ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು, ಜೀವನದ ದಾರಿ ತೋರಿದ ಶಿಕ್ಷಕರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ತಾಲೂಕಿನ ಪ್ರೌಢಶಾಲೆ, ಪ್ರಾಥಮಿಕ ಶಾಲೆ ಹಾಗೂ ಶಿಕ್ಷಣ ಇಲಾಖೆಯ ಬೋಧಕೇತರ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಎಸ್‌ಎಲ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ವೇದಿಕೆಯಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ. ಜಯವರ್ಧನ, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ. ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ರಾಜ್ಯ ಸಮಿತಿ ಸಹ ಕಾರ್ಯದರ್ಶಿ ಎಸ್.ಎ. ಯೋಗೇಶ್, ಬೋಧಕೇತರ ಸಂಘದ ಅಧ್ಯಕ್ಷ ಸುರೇಶ್, ಬಿಆರ್‌ಸಿ ಶಶಿಧರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ನಿವೃತ್ತ ಮುಖ್ಯ ಶಿಕ್ಷಕಿ ಕುಂತಿ ಬೋಪಯ್ಯ ಮತ್ತಿತರರು ಪಾಲ್ಗೊಂಡಿದ್ದರು.