ಮಡಿಕೇರಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ಮತ್ತು ಸಂಪಾಜೆ ಸ್ಥಳೀಯ ಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮಡಿಕೇರಿಯ ಕೊಡಗು ಜಿಲ್ಲಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಅಧಿಕಾರಿಗಳಾದ ಕಾಂತ್‌ರಾಜ್ ವಹಿಸಿದ್ದರು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಉದ್ಘಾಟನೆಯನ್ನು ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ನಳಿನ ನೆರವೇರಿಸಿದರು.

ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಪಾಜೆ ಸ್ಥಳೀಯ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಚೇರಂಬಾಣೆಯ ಫ್ಲಾಕ್ ಲೀಡರ್ ಬಿ.ಕೆ. ಲಲಿತಾ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಮಡಿಕೇರಿ ಸ್ಥಳೀಯ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮೇಕೇರಿಯ ಸ್ಕೌಟ್ಸ್ ಶಿಕ್ಷಕ ಪ್ರಸನ್ನ ಕುಮಾರ್ ಎ.ಹೆಚ್. ಮತ್ತು ಸಂತ ಜೋಸೆಫರ ಆಂಗ್ಲಮಾಧ್ಯಮ ಶಾಲೆಯ ಫ್ಲಾಕ್ ಲೀಡರ್ ಗೆರ್ಟ್ರೂಡ್ ಟಿ.ಜಿ. ಅವರುಗಳನ್ನು ಸನ್ಮಾನಿಸಲಾಯಿತು. ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಪಡೆದವರು ಮಾತನಾಡಿ, ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು. ಶಿಕ್ಷಣಾಧಿಕಾರಿ ಕಾಂತರಾಜ್ ಮಾತನಾಡಿ, ಇದು ಒಂದು ಸೇವಾ ಮನೋಭಾವನೆ ಹೊಂದಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಯ ಮೇಲೆ ಬಹಳ ಅಭಿಮಾನ ಇಟ್ಟುಕೊಂಡಿರುವೆ. ಮುಂದಕ್ಕೂ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮಾಸ್ಟರ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಆಗಿರುವ ಸಂದೇಶ, ಜಿಲ್ಲಾ ಸಂಘಟಕರಾದ ದಮಯಂತಿ, ಎಜಿ.ವಿ. ರಂಜಿನಿ, ಶಿಕ್ಷಕ ವೃಂದದವರು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಇದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ ನೆರವೇರಿಸಿದರು. ಮಡಿಕೇರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವಸಂತಿ ವಂದನಾರ್ಪಣೆ ಮಾಡಿದರು.