ಸೋಮವಾರಪೇಟೆ, ಸೆ. ೨೧: ರಾಷ್ಟçದಾದ್ಯಂತ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಬೀದಿಗೆ ತಳ್ಳಿದೆ. ಇದರೊಂದಿಗೆ ದೇವಾಲಯಗಳನ್ನು ನೆಲಸಮ ಮಾಡುವ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ನಗರ ಕಾಂಗ್ರೆಸ್ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿ, ದೇಶದ ಜನರನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ದೂರಿದರು.
ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಐತಿಹಾಸಿಕ ದೇವಾಲಯಗಳನ್ನು ನೆಲಸಮ ಮಾಡಿದೆ. ಪುರಾತನ ದೇವಾಲಯಗಳನ್ನು ಅಧಿಕಾರಿಗಳು ಒಡೆದು ಹಾಕುತ್ತಿದ್ದು, ವಿಗ್ರಹಗಳನ್ನು ಬೇಕಾ ಬಿಟ್ಟಿ ಎಸೆಯುತ್ತಿದ್ದಾರೆ. ಇಂತಹ ಪ್ರಮಾದಕ್ಕೆ ಸರ್ಕಾರ ಹಾಗೂ ಅಧಿಕಾರಿಗಳೇ ಕಾರಣರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿದ್ದ ಎಸ್ಸಿ ಘಟಕದ ರಾಜ್ಯ ಸಮಿತಿ ಸದಸ್ಯ ಬಿ.ಇ. ಜಯೇಂದ್ರ ಮಾತನಾಡಿ, ಮೋದಿ ನೇತೃತ್ವದ ಸರ್ಕಾರ ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದು, ನಂತರ ದೇಶದ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡ ಮಂದಿಯ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ದೂರಿದರು.
ನಂತರ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ತೆರಳಿದ ಕಾರ್ಯಕರ್ತರು, ಕಚೇರಿ ಎದುರು ಘೋಷಣೆಗಳನ್ನು ಕೂಗಿದರು. ಈ ಸಂಬAಧಿತ ಮನವಿಯನ್ನು ತಾಲೂಕು ಕಚೇರಿ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್, ಓಬಿಸಿ ಘಟಕದ ಬ್ಲಾಕ್ ಅಧ್ಯಕ್ಷ ಗಂಗಾಧರ್, ಸೇವಾದಳ ಅಧ್ಯಕ್ಷ ಬಸವರಾಜು, ಕಾರ್ಯಕರ್ತರಾದ ರಾಜಪ್ಪ, ರಘು, ಅಜಯ್, ಶೈಲ, ಸಂದ್ಯಾ, ನೆಲ್ಸನ್, ಸಂದೀಪ್ ಸೇರಿದಂತೆ ಇತರರು ಭಾಗವಹಿಸಿದ್ದರು.