ಮುಳ್ಳೂರು, ಸೆ. ೨೩: ಸಮೀಪದ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ವತಿಯಿಂದ ಆಲೂರು-ಸಿದ್ದಾಪುರ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಸೇತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಹತ್ತನೆ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡ ಮಾರ್ಗಸೂಚಿ ಗೈಡ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರೋಟರಿ ಮಲ್ಲೇಶ್ವರ ಕ್ಲಬ್ ಸದಸ್ಯ ಮತ್ತು ಅಂಕನಹಳ್ಳಿ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಿ.ಎಂ. ಹೇಮಂತ್, ಕೋವಿಡ್ನಿಂದ ಕಳೆದ ೨ ವರ್ಷಗಳಿಂದ ಶಾಲೆಗಳು ಪ್ರಾರಂಭವಾಗಿರಲಿಲ್ಲ ಈ ಸನ್ನಿವೇಶದಲ್ಲಿ ವಿದ್ಯಾರ್ಥಿ ಸಮೂಹ ತೊಂದರೆ ಅನುಭವಿಸಿದ್ದು, ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ವಿಶೇಷವಾಗಿ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಲು ಪೂರಕ ವಾದ ಮಾದರಿ ಪ್ರಶ್ನೆ ಪತ್ರಿಕೆಯ ಮಾಹಿತಿ ಒಳಗೊಂಡ ಗೈಡ್ ಪುಸ್ತಕ ಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕಿ ಎಸ್. ಶೃತಿ ಮಾತನಾಡಿ, ಸರಕಾರಿ ಶಾಲೆಗಳ ಅಭಿವೃದ್ಧಿಯತ್ತ ಸಂಘ-ಸAಸ್ಥೆಗಳು ಚಿಂತನೆ ಹರಿಸಿದರೆ ಸರಕಾರಿ ಶಾಲೆಗಳು ಮತ್ತಷ್ಟು ಪ್ರಗತಿ ಸಾಧಿಸುತ್ತದೆ ಎಂದರು.
ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಎಂ.ಇ. ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ರೋಟರಿ ಸಂಸ್ಥೆಗೆ ಸರಕಾರಿ ಶಾಲೆಗಳ ಪ್ರಗತಿ ಬಗ್ಗೆ ವಿಶೇಷ ಕಾಳಜಿ ಇದ್ದು ಈ ನಿಟ್ಟಿನಲ್ಲಿ ಸಂಸ್ಥೆಯು ಸರಕಾರಿ ಶಾಲೆಗಳ ಪ್ರಗತಿಗಾಗಿ ಸರಕಾರ ಮತ್ತು ಶಿಕ್ಷಣ ಇಲಾಖೆಯ ಜೊತೆ ಕೈಜೋಡಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಲೋಕೇಶ್, ನಿಕಟಪೂರ್ವ ಕಾರ್ಯದರ್ಶಿ ಸಂಪತ್ ಕುಮಾರ್ ಮಾತನಾಡಿದರು. ವೇದಿಕೆಯಲ್ಲಿ ರೋಟರಿ ನಿಕಟ ಪೂರ್ವ ಅಧ್ಯಕ್ಷ ಎಚ್.ಇ. ತಮ್ಮಯ್ಯ, ರೋಟರಿ ಸದಸ್ಯ ಹೆಚ್.ಬಿ. ಕುಶ, ಲತೇಶ್, ರೋಟರಿ ಕ್ಲಬ್ ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.