ಭಾರತ್ ಬಂದ್: ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಬೆಂಗಳೂರು, ಸೆ. ೨೭: ಕೇಂದ್ರದ ನೂತನ ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವAತೆ ಒತ್ತಾಯಿಸಿ ಸಂಯುಕ್ತ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಂದ್ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮತ್ತೆ ಕೆಲವು ಜಿಲ್ಲೆಗಳಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ ಬಗ್ಗೆ ವರದಿಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಹೆದ್ದಾರಿ ತಡೆಗೆ ಮುಂದಾದ ೨೦ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೆಜೆಸ್ಟಿಕ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಸ್‌ಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದರು.
ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ : ನಾಲ್ವರು ಯೋಧರಿಗೆ ಗಾಯ
ಶ್ರೀನಗರ, ಸೆ. ೨೭: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನುಮಾನಾಸ್ಪದ ಚಲನವಲನ ಗಮನಿಸಿದ ನಂತರ ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆ ಒಳನುಸುಳುವಿಕೆ ತಡೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಉರಿಯಲ್ಲಿನ ಎಲ್‌ಒಸಿಯಾದ್ಯಂತ ನುಸುಳುಕೋರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ್ ಬಂದ್: ಮೂವರು ರೈತರ ಸಾವು
ನವದೆಹಲಿ, ಸೆ. ೨೭: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಇಂದು ನಡೆದ ಭಾರತ್ ಬಂದ್ ವೇಳೆ ಪ್ರತಿಭಟನಾ ನಿರತ ಮೂವರು ರೈತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೃಷಿ ಕಾಯ್ದೆ ವಿರೋಧಿಸಿ ಹರಿಯಾಣ- ದೆಹಲಿ ನಡುವಿನ ಸಿಂಘು ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನಾ ನಿರತ ಬಾಗೆಲ್ ರಾಮ್ ಎಂಬ ರೈತನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಲ್ಲದೆ ಭಾರತ್ ಬಂದ್ ನಿಮಿತ್ತ ಸಿಂಗು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರೈತರ ಪೈಕಿ ಎಸ್. ತಾರಾ ಸಿಂಗ್ ಎಂಬ ರೈತ ಸಾಮ್ರಾಲಾ ಟೋಲ್ ಪ್ಲಾಜಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ದರ್ ಸಿಂಗ್ ಎಂಬವರು ಸಿಂಘು ಗಡಿಗೆ ಹೋಗುವ ದಾರಿಯಲ್ಲಿ ಸಂಭವಿಸಿದ ಮಾರಣಾಂತಿಕ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.