ಸೋಮವಾರಪೇಟೆ, ಅ. ೬: ರಾಷ್ಟಿçÃಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಸೋಮವಾರಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಉತ್ತರಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸುವ ಮೂಲಕ ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಹಾಗೂ ಯು.ಪಿ. ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭ ಉತ್ತರ ಪ್ರದೇಶದಲ್ಲಿ ಪ್ರತಿಭಟನಾನಿರತರಾಗಿದ್ದ ರೈತರ ಮೇಲೆ ವಾಹನ ಚಲಾಯಿಸಿ ಸಾವಿಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು, ಮೃತಪಟ್ಟ ರೈತರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಹಚ್ಚಿ ಪ್ರಾರ್ಥಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜ, ಕಾಂಗ್ರೆಸ್ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕ ಬಿ.ಇ. ಜಯೇಂದ್ರ, ಡಿಕೆಶಿ ಅಭಿಮಾನಿಗಳ ಬಳಗದ ಜಿಲ್ಲಾ ಕಾರ್ಯದರ್ಶಿ ಕೆ.ಪಿ. ದಿನೇಶ್, ಬ್ಲಾಕ್ ಸೇವಾದಳ ಅಧ್ಯಕ್ಷ ಬಿ. ಬಸವರಾಜು, ಕಾರ್ಯಕರ್ತರಾದ ರಾಜಪ್ಪ, ಮಹಮ್ಮದ್ ಶಫಿ, ಗೌರಮ್ಮ, ಸುಜಿತ್, ರಘು, ನಿರ್ಮಲ, ಸಂಧ್ಯಾ, ಮೀನ ಸೇರಿದಂತೆ ಇತರರು ಭಾಗವಹಿಸಿದ್ದರು.