ನಾಪೋಕ್ಲು, ಅ. ೨೨: ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ಬಳಿ ನರೇಗಾ ಯೋಜನೆಯಡಿಯಲ್ಲಿ ೭ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಉದ್ಯಾನವನವನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎಸ್. ಪಾರ್ವತಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಉದ್ಯಾನವನವನ್ನು ನಿರ್ಮಿಸಲಾಗಿದೆ. ಇದನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಸಾರ್ವಜನಿಕರ ಮೇಲೂ ಇದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳ ಉತ್ಸಾಹದಿಂದ ಸುಂದರ ಉದ್ಯಾನವನ ನಿರ್ಮಾಣಗೊಂಡಿದೆ. ಮುಂದಿನ ದಿನಗಳಲ್ಲಿ ಇದನ್ನು ಉತ್ತಮ ನಿರ್ವಹಣೆ ಮಾಡುವಂತೆ ಸಲಹೆ ನೀಡಿದರು.

ಜೆಡಿಎಸ್ ಮುಖಂಡ ಎಂ.ಎ. ಮನ್ಸೂರ್ ಅಲಿ ಮಾತನಾಡಿ, ತ್ಯಾಜ್ಯ ಹಾಕುತ್ತಿದ್ದ ಸ್ಥಳದಲ್ಲಿ ಸುಂದರ ಉದ್ಯಾನವನ ರೂಪುಗೊಂಡಿದೆ. ಇದನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಎA. ಖುರೇಶಿ, ಮಾಜಿ ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆಕಾಶ್, ಆಡಳಿತಾಧಿಕಾರಿ ಮಧುಸೂದನ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಸ್ವಾಗತಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ವಂದಿಸಿದರು.