ಸಿದ್ದಾಪುರ, ಅ. ೨೫: ಸಿದ್ದಾಪುರ ಗ್ರಾಮ ಪಂಚಾಯಿತಿ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸಿದ್ದಾಪುರದ ಪಂಚಾಯಿತಿ ಆವರಣದಲ್ಲಿ ಸಂಜೀವಿನಿ ಸಂತೆ ಮೇಳ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತೀತಿರ ರೀನಾ ತುಳಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಹಿಳೆಯರು ಸ್ವಯಂ ಉದ್ಯೋಗ ಮಾಡುವ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕೆಂದು ಕರೆ ನೀಡಿದರು.

ಮಹಿಳೆಯರು ಮನೆಯ ನಾಲ್ಕು ಗೋಡೆಗಳಿಂದ ಹೊರಬಂದು ಸ್ವಯಂ ಉದ್ಯೋಗ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕಿವಿಮಾತು ಹೇಳಿದರು. ಗ್ರಾಮ ಪಂಚಾಯಿತಿಯ ವತಿಯಿಂದ ಮಹಿಳೆಯರಿಗೆ ಸಿಗುವ ಸರಕಾರದ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಯೋಜನಾ ಅಧಿಕಾರಿ ಶ್ರೀಕಂಠಮೂರ್ತಿ ಮಾತನಾಡಿ, ಮಹಿಳೆ ಯರು ತಮ್ಮ ಜೀವನೋಪಾಯಕ್ಕಾಗಿ ಕೌಶಲ್ಯ ಅಭಿವೃದ್ಧಿಯ ಮೂಲಕ ತಮ್ಮ ಬದುಕು ಕಟ್ಟಿಕೊಳ್ಳಬೇಕೆಂದರು. ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಮಹಿಳೆಯರು ಸ್ವಯಂ ಉದ್ಯೋಗ ಮಾಡಲು ಈ ಭಾಗದ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ. ೨೦ ಲಕ್ಷ ಸಾಲವನ್ನು ನೀಡಲಾಗಿದ್ದು, ಮಹಿಳೆಯರು ಅಭಿವೃದ್ಧಿ ಹೊಂದಬೇಕೆAದರು. ಸಂಜೀವಿನಿ ಒಕ್ಕೂಟದ ನಿರ್ದೇಶಕರಾದ ಕುಮಾರ್ ಮಾತನಾಡಿ, ಮಹಿಳೆಯರು ಸ್ವತಃ ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ಒದಗಿಸಿಕೊಡುವ ನಿಟ್ಟಿನಲ್ಲಿ ತಿಂಗಳ ಸಂತೆಯAತೆ ಸಂಜೀವಿನಿ ಸಂತೆಮೇಳ ಆರಂಭಿಸಲಾಗಿದೆ ಎಂದರು.