ಮಡಿಕೇರಿ, ಅ. ೨೯: ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಗಲ್ಲಿಗೇರಿಸ ಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾನಿರತರು ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗ್ರಾಮವೊಂದರಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿ ಮೇಲೆ ಪ್ರಭಾವಿ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು ಬಾಲಕಿಗೆ ನ್ಯಾಯ ಒದಗಿಸಿಕೊಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಈ ಸಂದರ್ಭ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್, ಯುವತಿ ಕೆಲಸ ಮಾಡುತ್ತಿದ್ದ ತೋಟದ ಮಾಲೀಕ ನಾರಾಯಣ ರೈ ರಾಜಕೀಯ ಹಿನ್ನೆಲೆ ಹೊಂದಿದ್ದು, ಆತನ ರಕ್ಷಣೆಯನ್ನು ಸರಕಾರ ಮಾಡುತ್ತಿದೆ. ಅತ್ಯಾಚಾರವೆಸಗಿ ಕೊಲೆ ಮಾಡುವುದಾಗಿ ಅಪ್ರಾಪ್ತೆಗೆ ಬೆದರಿಕೆ ಒಡ್ಡಿದ್ದಾನೆ. ಈ ಘಟನೆ ಸಂಭವಿಸಿ ಒಂದು ವರ್ಷ ಕಳೆದಿದ್ದು ಇದೀಗ ಬೆಳಕಿಗೆ ಬಂದಿದೆ. ಬಾಲಕಿ ಇದೀಗ ಒಂದು ಹೆಣ್ಣು ಮಗುವಿನ ತಾಯಿಯಾಗಿದ್ದು, ಕೂಡಲೇ ಆರೋಪಿತನನ್ನು ಬಂಧಿಸಿ ಗಲ್ಲು ಶಿಕ್ಷೆ ನೀಡಬೇಕು ಹಾಗೂ ಆರೋಪಿಯ ಆಸ್ತಿಯಲ್ಲಿನ ಶೇ. ೨೫ ಭಾಗವನ್ನು ಬಾಲಕಿಗೆ ನೀಡಬೇಕೆಂದು ಆಗ್ರಹಿಸಿದರು. ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಅಂಗಾರ ದಲಿತ ಸಮುದಾಯದಿಂದ ಬಂದAತಹ ಸಚಿವರಾಗಿದ್ದರೂ ಕೂಡ ದಲಿತ ಸಮುದಾಯದ ಯುವತಿಯ ಪರ ಧ್ವನಿಯೆತ್ತದೆ ನಿರ್ಲಕ್ಷö್ಯ ತೋರಿದ್ದಾರೆ ಎಂದು ಆರೋಪಿಸಿದರು.

ಕೊಡಗು ಜಿಲ್ಲೆಯಲ್ಲಿಯೂ ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು ಇವೆಲ್ಲಾ ಘಟನೆಗಳನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಇದೇ ರೀತಿಯ ಕೃತ್ಯಗಳು ಮರುಕಳಿಸಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವಿಭಾಗೀಯ ಸಂಚಾಲಕ ಎನ್ ವೀರಭದ್ರಯ್ಯ, ಮಡಿಕೇರಿ ತಾಲೂಕು ಸಂಚಾಲಕ ದೀಪಕ್, ಸಂಪಾಜೆ ಹೋಬಳಿ ಅಧ್ಯಕ್ಷ ಸಂತೋಷ್ ಸೇರಿದಂತೆ ಇನ್ನಿತರರು ಇದ್ದರು.