ಮಡಿಕೇರಿ, ಅ. ೨೯: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ಇಲಿಜ್ವರ ನಿಯಂತ್ರಣ ಕುರಿತು ಕೊಡಗು ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರದ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯೆದ್ಯಾಧಿಕಾರಿಗಳಿಗೆ ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಿತು.

ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆರ್. ವೆಂಕಟೇಶ್ ಅವರು ಉದ್ಘಾಟಿಸಿ, ನಂತರ ಜಿಲ್ಲೆಯಲ್ಲಿ ಇಲಿಜ್ವರ ನಿಯಂತ್ರಣ ಕಾರ್ಯಕ್ರಮಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳ ಸಮನ್ವಯ ಮತ್ತು ಸಹಕಾರದೊಂದಿಗೆ ಯಶಸ್ವಿಯಾಗಿ ನಿರ್ವಹಿಸಲು ವ್ಯೆದ್ಯಾಧಿಕಾರಿಗಳಿಗೆ ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಿಗೆ ಸೂಚಿಸಿದರು.

ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಎನ್. ಆನಂದ್ ಅವರು ವ್ಯೆದ್ಯಾಧಿಕಾರಿಗಳಿಗೆ ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಿಗೆ ಇಲಿಜ್ವರದ ಕುರಿತು ನಿಯಂತ್ರಣ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿದರು.

ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮಹೇಶ್. ಎಸ್.ಹೆಚ್ ಅವರು ಇಲಿಜ್ವರ ರೋಗ ಹರಡುವ ರೀತಿ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.