ವೀರಾಜಪೇಟೆ, ಅ. ೨೯: ನ. ೧ ರಂದು ಆಚರಿಸುವ ಕನ್ನಡ ರಾಜ್ಯೋತ್ಸವವನ್ನು ಎಲ್ಲಾ ಸರಕಾರಿ ಕಚೇರಿಗಳಲ್ಲಿ ವಿದ್ಯುದೀಪ ಅಲಂಕಾರ ಮಾಡಿ ಆಚರಿಸುವಂತೆ ತೀರ್ಮಾನಿಸಲಾಯಿತು.

ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ತಾಲೂಕು ತಹಶೀಲ್ದಾರ್ ಆರ್. ಯೋಗನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ವೀರಾಜಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರೆದಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್, ನ. ೧ ರಂದು ಯಾವುದೇ ಮೆರವಣಿಗೆ ಕಾರ್ಯಕ್ರಮ ಇರುವುದಿಲ್ಲ. ಅಂದು ಬೆಳಿಗ್ಗೆ ೯.೩೦ಕ್ಕೆ ಧ್ವಜಾರೋಹಣ ಮತ್ತು ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಸಂಸದರು, ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಉಪ ತಹಶೀಲ್ದಾರ್ ಪ್ರದೀಪ್‌ಕುಮಾರ್, ಹೆಚ್.ಕೆ. ಪೊನ್ನು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಕೆ. ಅಪ್ಪಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೀಳಗಿ, ತೋಟಗಾರಿಕೆ ಇಲಾಖೆಯ ದೀನಾ, ಕೊಡಗು ಜಿಲ್ಲೆ ಕನ್ನಡ ಜಾಗೃತಿ ಸಮಿತಿ ಸದಸ್ಯೆ ರಜಿತಾ ಕಾರ್ಯಪ್ಪ, ಕಂದಾಯ ಇಲಾಖೆ, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ, ಶಿಕ್ಷಣ, ಅಬಕಾರಿ, ಅರಣ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.