*ವೀರಾಜಪೇಟೆ, ನ. ೪: ನಗರದ ಸುಂಕದಕಟ್ಟೆಯ ಸಮುದಾಯ ಭವನದಲ್ಲಿ ಆರ್ಥಿಕ ಸ್ಪಂದನ ಸಂಘದಿAದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ನಡೆಯಿತು.
ವೀರಾಜಪೇಟೆ ತಾಲೂಕು ದಂಡಾಧಿಕಾರಿ ಯೋಗಾನಂದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಸಂತಸದ ವಿಚಾರ. ಬಡತನದಲ್ಲಿರುವ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ, ಅವರಿಗೆ ಆರ್ಥಿಕ ಸಹಾಯ ಮಾಡಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ ಎಂದರು.
ವೀರಾಜಪೇಟೆ ನಗರ ಠಾಣೆಯ ಠಾಣಾಧಿಕಾರಿ ಜಗದೀಶ್ ಧೂಳ್‌ಶೆಟ್ಟಿ ಮಾತನಾಡಿ, ಈ ರೀತಿಯ ಕಾರ್ಯಕ್ರಮ ಆಯೋಜನೆ ಸಮಾಜದಲ್ಲಿ ಒಳ್ಳೆಯ ಬೆಳವಣಿಗೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೇ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರು ಸರಿಯಾದ ದಾರಿಯಲ್ಲಿ ಸಾಗಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಸುಂಕದಕಟ್ಟೆಯ ೨೭ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕ.ರ.ವೇ. ತಾಲೂಕು ಅಧ್ಯಕ್ಷ ಅನಿಲ್‌ಕುಮಾರ್, ಹ್ಯೂಮಾನಿಟಿ ಬ್ಲಡ್ ಡೊನೇಟರ್ಸ್ ಸಂಘದ ಅಧ್ಯಕ್ಷ ಫೈಜಲ್ ಅವರ ಸೇವೆ ಪರಿಗಣಿಸಿ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಅರುಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ ಮಹೇಶ್, ಸಂಘದ ಮಹಿಳಾ ಅಧ್ಯಕ್ಷೆ ಲಾಲಿ, ಜಿಲ್ಲಾ ಬಿ.ಜೆ.ಪಿ. ಯುವ ಮೋರ್ಚಾದ ಕಾರ್ಯದರ್ಶಿ ವಿಷ್ಣು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.