ವೀರಾಜಪೇಟೆ, ನ. ೧೨: ವೀರಾಜಪೇಟೆ ತಾಲೂಕು ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟೋಳಿಯಲ್ಲಿ ಅಂಗನವಾಡಿ ಕೇಂದ್ರ ಹಾಗೂ ಅಂಬೇಡ್ಕರ್ ಭವನ, ಚಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿಕೊಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಸಂಚಾಲಕ ಹೆಚ್.ಆರ್. ಶಿವಣ್ಣ, ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದರು.
ಕೊಟ್ಟೋಳಿ ಗ್ರಾಮದಲ್ಲಿ ಸುಮಾರು ೫೦ ರಿಂದ ೬೦ ಕುಟುಂಬಗಳಿದ್ದು, ಅವರ ಮಕ್ಕಳಿದ್ದು, ಅಂಗನವಾಡಿ ದೂರವಿರುವುದರಿಂದ ಪೋಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಪೊನ್ನಂಪೇಟೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕೊಟ್ಟೋಳಿಯಲ್ಲಿ ಒಂದು ಅಂಗನವಾಡಿ ಕೇಂದ್ರವನ್ನು ಮಂಜೂರು ಮಾಡಿಕೊಡಬೇಕು. ಜೊತೆಗೆ ಅಂಬೇಡ್ಕರ್ ಭವನ ನಿರ್ಮಾಣ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.
ಚಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಜನಾಂಗದವರು ಸಭೆ ಸಮಾರಂಭಗಳನ್ನು ನಡೆಸಲು ಸ್ಥಳಾವಕಾಶ ಇಲ್ಲದ ಕಾರಣ ಐಮಂಗಲದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿಕೊಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.