ಸಿದ್ದಾಪುರ, ನ. ೧೫: ಸಂಘಟನೆಯನ್ನು ಬಲಪಡಿಸುವ ಮೂಲಕ ಭ್ರಷ್ಟಾಚಾರದ ವಿರುದ್ಧ ಸಂಘಟಿತರಾಗಿ ಹೋರಾಟ ಮಾಡಬೇಕೆಂದು ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣೆ ವೇದಿಕೆಯ ರಾಜ್ಯಾಧ್ಯಕ್ಷ ಜೆ. ಜವರೇಗೌಡ ಕರೆ ನೀಡಿದರು. ಸಿದ್ದಾಪುರದ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಪ್ರಾಂತ್ಯ ರಹಿತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಇದನ್ನು ನಿರ್ಮೂಲನೆ ಮಾಡಲು ಸಂಘಟನೆಯು ಒಗ್ಗಟ್ಟಾಗಿ ಸಂಘಟಿತರಾಗಿ ಹೋರಾಟ ಮಾಡಬೇಕೆಂದು ಸಲಹೆ ನೀಡಿದರು. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಸರ್ಕಾರಗಳು ಕೂಡ ಜನವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಟೀಕಿಸಿದರು. ಇದರ ವಿರುದ್ಧ ಸಂಘಟನೆಗಳು ಎಚ್ಚೆತ್ತುಕೊಂಡು ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಸರ್ಕಾರಗಳು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕ್ಷೇತ್ರಗಳನ್ನು ಖಾಸಗೀಕರಣ ಮಾಡುತಿರುವುದು ಖಂಡನೀಯ ಎಂದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕೊಡಗು ಜಿಲಾಧÀ್ಯಕ್ಷ ಕೆ.ಕೆ. ಶಶಿಕುಮಾರ್ ಮಾತನಾಡಿ, ಸಂಘಟನೆಯು ಭ್ರಷ್ಟಾಚಾರದ ವಿರುದ್ಧ ಮುಂದಿನ ದಿನಗಳಲ್ಲಿ ನಿರಂತರವಾಗಿ ಹೋರಾಟ ಮಾಡಲು ಯೋಜನೆ ರೂಪಿಸಲಾಗಿದೆ. ಸಂಘಟನೆಯು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಕಳೆದೆರಡು ವರ್ಷಗಳಲ್ಲಿ ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ನೆರವು ನೀಡಲಾಗಿದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣೆ ವೇದಿಕೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣೆ ವೇದಿಕೆಯ ಪ್ರಮುಖರಾದ ನಳಿನಾಗೌಡ, ದೇವರಾಜ್, ಮಧುಗೌಡ, ಪಡಿಕ್ಕಳ್ ಕುಸ್ಮಾಚಂದ್ರಶೇಖರ್, ವಿನೋದ್ ಎಂ.ಡಿ, ಪೂರ್ಣಿಮಾ ಚಂದ್ರಶೇಖರ್, ಹೆಚ್.ಎಂ ಮಂಜುಳಾ, ಮೊಹಮ್ಮದ್ ಇಲಿಯಾಸ್, ಪ್ರದೀಪ್, ಮನೋಜ್, ಅನಿಲ್ ಕುಮಾರ್, ಕೆ.ಸಿ ಜನಾರ್ಧನ ಇನ್ನಿತರರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಗೀತಾ ನಾಯ್ಡು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.