ಶನಿವಾರಸAತೆ, ನ. ೧೭: ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ನೆರವು ಪಡೆದು ಇಬ್ಬರು ಶಿಕ್ಷಕಿಯರ ನೇಮಕದೊಂದಿಗೆ ಶಾಲಾಭಿವೃದ್ಧಿ ಸಮಿತಿಯ ಸಹಕಾರದಿಂದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಚಾಲನೆ ನೀಡಲಾಗಿದೆ. ಆರಂಭದಲ್ಲೇ ೫೭ ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದು ಉತ್ಸಾಹ ಮೂಡಿಸಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ತಿಳಿಸಿದ್ದಾರೆ.
ಸಮೀಪದ ಕೊಡ್ಲಿಪೇಟೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಂದ್ರೋಜಿರಾವ್ ಮಾತನಾಡಿ, ಸರಕಾರದ ಆದೇಶದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ರಚಿಸಿ, ಶಿಕ್ಷಣಾಧಿಕಾರಿಗಳ ಅನುಮತಿ ಪಡೆದು ತರಗತಿ ಆರಂಭಿಸಲಾಗಿದೆ ಎಂದರು.
ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ರಾಜ್ಯ ಸರಕಾರ ಸರಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿದೆ. ಸರಕಾರ ಈ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಮನವಿ ಮಾಡಿದರು.
ದಾನಿ ಡಿ. ಭಗವಾನ್, ಉಸ್ತುವಾರಿ ಹಾಗೂ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಕಾರ್ಯದರ್ಶಿ ವಸಂತ್, ವೀರಭದ್ರ, ರೇವಣ್ಣ, ಮುಖ್ಯ ಶಿಕ್ಷಕಿ ಗೌರಮ್ಮ, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.