ನಾಪೋಕ್ಲು, ನ. ೨೧: ಬೆಳೆ ನಷ್ಟ ಪರಿಹಾರಕ್ಕೆ ಸಮೀಪದ ಪೇರೂರು ಗ್ರಾಮ ಮತ್ತು ಕಕ್ಕಬ್ಬೆ ಬಳಿಯ ಗ್ರಾಮಗಳನ್ನು ಮಾತ್ರ ಸೇರಿಸಲಾಗಿದೆ. ಇದರಿಂದ ಇತರ ಬೆಳೆಗಾರರಿಗೆ ಅನ್ಯಾಯ ಮಾಡಿದಂತಾಗಿದೆ. ಆದ್ದರಿಂದ ನಷ್ಟ ಉಂಟಾಗಿರುವ ಎಲ್ಲಾ ಗ್ರಾಮಗಳನ್ನು ಬೆಳೆ ನಷ್ಟ ಪರಿಹಾರಕ್ಕೆ ಸೇರಿಸಲು ಮುಖ್ಯಮಂತ್ರಿಗಳು ಕ್ರಮಕೈಗೊಳ್ಳಬೇಕು ಎಂದು ಜಯಕರ್ನಾಟಕ ಸಂಘಟನೆಯ ಮಡಿಕೇರಿ ತಾಲೂಕು ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಕಳೆದ ಜೂನ್ ತಿಂಗಳಿನಿAದ ಎಡೆಬಿಡದೆ ಮಳೆ ಸುರಿದ ಪರಿಣಾಮ ಜಿಲ್ಲೆಯ ಪ್ರಮುಖ ಬೆಳೆಯಾದ ಕಾಫಿ, ಅಂತರ ಬೆಳೆಯಾದ ಕಾಳುಮೆಣಸು, ಅಡಿಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಜಿಲ್ಲಾಧಿಕಾರಿಗಳು ಎರಡು ಗ್ರಾಮಗಳನ್ನು ಮಾತ್ರ ಬೆಳೆ ನಷ್ಟ ಪರಿಹಾರಕ್ಕೆ ಆಯ್ಕೆ ಮಾಡಿದ್ದಾರೆ. ಇದರಿಂದ ಇತರ ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ನಷ್ಟ ಉಂಟಾಗಿರುವ ಎಲ್ಲಾ ಗ್ರಾಮಗಳನ್ನು ಬೆಳೆ ಪರಿಹಾರ ಪಟ್ಟಿಗೆ ಸೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.