ಕರಿಕೆ, ನ. ೨೨: ಮಡಿಕೇರಿ ತಾಲೂಕಿನ ಹಾಕತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ ಜರುಗಿತು. ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲೇ ಬೆಳೆದ ಕೆಲವು ತರಕಾರಿ, ಹಣ್ಣು, ತಾವೇ ತಯಾರಿಸಿದ ತಂಪು ಪಾನೀಯ, ತಿಂಡಿ ತಿನಿಸುಗಳನ್ನು ಮಾರಾಟ ಮಾಡಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿ ವನಜ ಉದ್ಘಾಟಿಸಿದರು. ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿ ಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.