ಸೋಮವಾರಪೇಟೆ,ನ.೨೬: ಆಡಳಿತದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದು ತಾಲೂಕು ತಹಶೀಲ್ದಾರ್ ಆರ್.ಗೋವಿಂದರಾಜು ಅಭಿಪ್ರಾಯಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತಿ ಸಮಿತಿ, ಪುಷ್ಪಗಿರಿ ಜೇಸೀ ಸಂಸ್ಥೆ, ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ಕಾಯಕ ವರ್ಷಾಚರಣೆ- ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಗಿದೆ. ಡಾ. ರಾಜ್‌ಕುಮಾರ್ ಅವರು ಗೋಕಾಕ್ ಚಳುವಳಿ ಮೂಲಕ ಕನ್ನಡ ಭಾಷಾ ಬೆಳವಣಿಗೆಗೆ ಸಾಕಷ್ಟು ಶ್ರಮಪಟ್ಟಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಸಾಹಿತ್ಯದ ಬಗ್ಗೆ ಜಾಗೃತಿ ಮೂಡಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ಪರ್ಧೆಗಳ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು. ಕನ್ನಡದ ಕೆಲಸಗಳಿಗೆ ತಾಲೂಕು ಆಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾತನಾಡಿ, ಕನ್ನಡ ಜೀವನದ ಭಾಷೆಯಾಗಬೇಕು. ಅನ್ಯ ಭಾಷೆಗಳ ಬಗ್ಗೆ ಅರಿವು ಹೊಂದಿರಬೇಕು. ಎಸ್.ಎಸ್.ಎಲ್.ಸಿ. ಯಲ್ಲಿ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳನ್ನು ಶಾಲಾಡಳಿತ ಮಂಡಳಿ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಮಾತನಾಡಿ, ಕನ್ನಡ ನಾಡು ನುಡಿ ಉಳಿಸುವ ಕಾರ್ಯ ಎಲ್ಲರಿಂದ ಆಗಬೇಕು. ಎಲ್ಲರೂ ಕನ್ನಡ ಬಳಸಬೇಕು ಎಂದರು. ಕುವೆಂಪು ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಮಿಲ್ಗೆçಡ್ ಗೊನ್ಸಾಲ್‌ವೆಸ್ ಮಾತನಾಡಿ, ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ, ಭಾಷೆಯ ಬಗ್ಗೆ ಅಭಿಮಾನ, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ವೇದಿಕೆಯಲ್ಲಿ ಕನ್ನಡ ಜಾಗೃತಿ ಸಮಿತಿಯ ಸದಸ್ಯೆ ಭಾರತಿ ರಮೇಶ್, ಈ. ರಾಜು, ಪುಷ್ಪಗಿರಿ ಜೇಸೀ ಸಂಸ್ಥೆಯ ಕಾರ್ಯಕ್ರಮ ಉಪಾಧ್ಯಕ್ಷೆ ಎಂ.ಎ.ರುಬೀನಾ ಅವರುಗಳು ಉಪಸ್ಥಿತರಿದ್ದರು. ಜಾಗೃತಿ ಸಮಿತಿಯ ಸದಸ್ಯ ಎಸ್.ಮಹೇಶ್, ಶಿಕ್ಷಕರಾದ ಪ್ರೇಮಾ, ಆಶಾ, ಬರಹಗಾರ್ತಿ ಶರ್ಮಿಳಾ ರಮೇಶ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.

ಸುಂಟಿಕೊಪ್ಪದ ಸೆಂಟ್ ಆನ್ಸ್ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ಅವರು ಕನ್ನಡ ಭಾಷೆ, ಸಾಹಿತ್ಯ, ಚಳುವಳಿ, ಇತಿಹಾಸದ ಬಗ್ಗೆ ಮಾಡಿದ ಭಾಷಣ ಎಲ್ಲರ ಗಮನ ಸೆಳೆಯಿತು. ಭಾಷಣದ ಮೂಲಕ ಪ್ರಕಟವಾದ ಶ್ರೀಶಾಳ ವಾಗ್ಝರಿ ಸಭಿಕರನ್ನು ಮಂತ್ರಮುಗ್ಧರನ್ನಾಗಿಸಿತ್ತು. ಕಾರ್ಯಕ್ರಮದಲ್ಲಿ ಶ್ರೀಶಾಳನ್ನು ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ, ಸಾಹಿತ್ಯ, ಇತಿಹಾಸದ ಬಗ್ಗೆ ವಿವಿಧ ಸ್ಪರ್ಧೆಗಳು ನಡೆಯಿತು.