ಸೋಮವಾರಪೇಟೆ,ನ.೩೦: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ತಾಲೂಕಿನ ವಿವಿಧ ಇಲಾಖಾಧಿಕಾರಿಗಳನ್ನು ಒಳಗೊಂಡ ತಂಡ ಸೋಮವಾರಪೇಟೆ ಹಾಗೂ ಶನಿವಾರಸಂತೆಗಳಲ್ಲಿ ಕಾರ್ಯಾಚರಣೆ ನಡೆಸಿ, ಮಕ್ಕಳ ರಕ್ಷಣೆ-ಪೋಷಣೆ ಬಗ್ಗೆ ಜಾಗೃತಿ ಮೂಡಿಸಿತು.
ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಗಳ ಸಹಯೋಗದೊಂದಿಗೆ ಅಧಿಕಾರಿಗಳ ತಂಡ, ಪಟ್ಟಣದ ವಿವಿಧ ಅಂಗಡಿ ಮುಂಗಟ್ಟು, ಹೊಟೇಲ್‌ಗಳಿಗೆ ದಿಢೀರ್ ಭೇಟಿ ನೀಡಿ, ಬಾಲ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಿತು.
ಈ ಸಂದರ್ಭ ಕೆಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೇ ಇರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವಂತೆ ಅಧಿಕಾರಿಗಳು ಸೂಚಿಸಿದರಲ್ಲದೇ, ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಿದರು.
ವಿವಿಧ ಅಂಗಡಿ ಮುಂಗಟ್ಟುಗಳಿಗೆ ತೆರಳಿದ ತಂಡ, ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯ ಬಗ್ಗೆ ಮಾಲೀಕರಿಗೆ ಜಾಗೃತಿ ಮೂಡಿಸಿ, ಬಿತ್ತಿ ಪತ್ರ ವಿತರಿಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪಿ.ಹೆಚ್. ಅಬ್ದುಲ್ ನಿಸಾರ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಸಿರಾಜ್ ಅಹ್ಮದ್, ಮಕ್ಕಳ ಸಹಾಯವಾಣಿ ಕೇಂದ್ರದ ಎ.ಎಸ್. ಯೋಗೇಶ್, ಪೊಲೀಸ್ ಇಲಾಖೆಯ ರಜನಿಕಾಂತ್ ಸೇರಿದಂತೆ ಇತರರು ತಂಡದಲ್ಲಿ ಕಾರ್ಯನಿರ್ವಹಿಸಿದರು.