ಸಿದ್ದಾಪುರ, ಡಿ. ೪: ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಸಂತ್ರಸ್ತ ಕುಟುಂಬಗಳಿಗೆ ನಿವೇಶನ ನೀಡಿದ ಜಾಗದಲ್ಲಿ ಕಿರು ಸೇತುವೆ ಮಾಡಬೇಕೆಂದು ಒತ್ತಾಯಿಸಿ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಆರ್ ಭರತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

೨೦೧೯ ರ ಮಹಾ ಮಳೆಗೆ ಕಾವೇರಿ ನದಿಯಲ್ಲಿ ಪ್ರವಾಹ ಏರಿಕೆಯಾಗಿ ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನೂರಾರು ಮನೆಗಳು ನೆಲಸಮಗೊಂಡಿದ್ದವು. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅರೆಕಾಡು ಸಮೀಪದ ಅಭ್ಯತ್‌ಮಂಗಲ ಗ್ರಾಮದಲ್ಲಿ ೮ ಏಕರೆ ಜಾಗವನ್ನು ಒತ್ತುವರಿದಾರರಿಂದ ವಶಪಡಿಸಿಕೊಂಡು ಜಿಲ್ಲಾಡಳಿತ ನಿವೇಶನ ಹಂಚಿಕೆ ಮಾಡಿತ್ತು. ಆದರೆ ಪುನರ್ವಸತಿ ಕಲ್ಪಿಸುವ ಜಾಗಕ್ಕೆ ಹಾದುಹೋಗುವ ಸ್ಥಳದಲ್ಲಿ ಗುಂಡಿಗಳಿದ್ದು, ಆ ಭಾಗದಲ್ಲಿ ತೋಡಿನ ಮೂಲಕ ನೀರು ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಸಮಸ್ಯೆ ಎದುರಾಗಿದೆ. ಕೂಡಲೇ ಕಿರು ಸೇತುವೆಯನ್ನು ನಿರ್ಮಾಣ ಮಾಡಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕೆಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂತ್ರಸ್ತರ ಹೋರಾಟ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.