ಮಡಿಕೇರಿ, ಡಿ. ೧೭: ಜನವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಲು ಅಗತ್ಯ ಕ್ರಮ ವಹಿಸುವಂತೆ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ. ಬಿ. ಸತೀಶ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ, ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಳ್ಳಲಾಗುವ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಮಾರ್ಗಸೂಚಿ ಅನುಸರಿಸಿ ಶಿಷ್ಟಾಚಾರದ ಪ್ರಕಾರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆಗಾಗಿ ನಗರದ ಜನರಲ್ ತಿಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸಿದ್ಧತೆ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ಅವರು ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳು ವಯೋಮಿತಿ ಆಧಾರದಲ್ಲಿ ಜರುಗಲಿವೆ. ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬ್ಯಾಡ್ಮಿಂಟನ್, ಕ್ರಿಕೆಟ್, ಬಾಸ್ಕೆಟ್‌ಬಾಲ್, ಟೇಬಲ್ ಟೆನ್ನಿಸ್, ಚೆಸ್ ಕೇರಂ ಮತ್ತಿತ್ತರ ಕ್ರೀಡಾಕೂಟ ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು. ನೌಕರರ ಸಂಘದ ಸದಸ್ಯರು ಇತರರು ಇದ್ದರು.