ಮಡಿಕೇರಿ, ಡಿ. ೨೦: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಾ. ೨೩ ರಂದು ಕೊಡಗು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಮಾಹಿತಿ ನೀಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್‌ನಿAದ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಅಂಗವಾಗಿ ಕಾವೇರಿ ಉಗಮಸ್ಥಳ ತಲಕಾವೇರಿಯಲ್ಲಿ ವಿಶೇಷ ಪೂಜೆ ನಡೆಸಿ ಆಶೀರ್ವಾದ ಪಡೆದುಕೊಳ್ಳಲಾಗುವುದು. ತಾ. ೨೩ ರಂದು ಸಂಜೆ ಜಿಲ್ಲೆಗೆ ಆಗಮಿಸಲಿರುವ ಡಿ.ಕೆ.ಶಿವಕುಮಾರ್ ಭಾಗಮಂಡಲ ವ್ಯಾಪ್ತಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ತಾ. ೨೪ ರಂದು ತಲಕಾವೇರಿಯಲ್ಲಿ ಬೆಳಿಗ್ಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ೧೧ ಗಂಟೆಗೆ ಮಡಿಕೇರಿ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಇವರೊಂದಿಗೆ ಕಾರ್ಯಾಧ್ಯಕ್ಷರಾದ ದ್ರುವನಾರಾಯಣ, ಸಲೀಂ ಅಹಮ್ಮದ್ ಭಾಗವಹಿಸಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಟಿ.ಪಿ. ರಮೇಶ್ ಮಾತನಾಡಿ, ರಾಜ್ಯಾಧ್ಯಕ್ಷರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಪಕ್ಷ ಸರ್ವ ಸಿದ್ಧತೆ ಮಾಡಿಕೊಂಡಿದೆ. ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ಆಯೋಜಿಸುವ ನಿಟ್ಟಿನಲ್ಲಿ ಮುಂಚೂಣಿ ಘಟಕಗಳ ಮುಖಂಡರ ಸಭೆ ನಡೆಸಲಾಗಿದೆ.
(ಮೊದಲ ಪುಟದಿಂದ) ವಿವಿಧ ಉಪಸಮಿತಿ ರಚಿಸಿ ಜವಾಬ್ದಾರಿ ನೀಡಲಾಗಿದೆ. ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ ಎಂದ ಅವರು, ಕಾರ್ಯಕ್ರಮದಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕಾಗಿದ್ದು, ಪ್ರತಿಯೊಬ್ಬರು ಮಾಸ್ಕ್ ಧರಿಸಿ ಆಗಮಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ, ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಜಿಲ್ಲಾ ವಕ್ತಾರ ಟಾಟು ಮೊಣ್ಣಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಾಯ್ಯ ಅಬ್ರಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಸ್ಮಾನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ಹಾನಗಲ್, ಪ್ರಮುಖರಾದ ವಿ.ಪಿ.ಶಶಿಧರ್, ಕೆ.ಎಂ. ಲೋಕೇಶ್, ತೆನ್ನೀರ ಮೈನಾ ಇದ್ದರು.