ಸೋಮವಾರಪೇಟೆ,ಡಿ೨೧: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಭಾಷ್ ನಗರಕ್ಕೆ ಮೂಲಭೂತ ಸೌಕರ್ಯ ಗಳನ್ನು ಒದಗಿಸಿಲ್ಲ; ಕುಡಿಯಲು ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಗ್ರಾಮಕ್ಕೆ ಸರಿಯಾಗಿ ಮೂಲಭೂತ ಸೌಲಭ್ಯಗಳನ್ನು ನೀಡದೆ ಕಂದಾಯವನ್ನು ತೆಗೆದುಕೊಳ್ಳ ಲಾಗುತ್ತಿದೆ. ಗ್ರಾಮದಲ್ಲಿ ಸರಿಯಾಗಿ ನೀರು ಸರಬರಾಜು ಮಾಡದೆ ಕಲುಷಿತ ನೀರು ಕುಡಿಯುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಭಾಷ್ ನಗರ ವ್ಯಾಪ್ತಿಯಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಮನೆಗಳಿದ್ದು ಕುಡಿಯುವ ನೀರಿಗೆ ಪರದಾಡು ವಂತಾಗಿದೆ. ವಾರದಲ್ಲಿ ಒಮ್ಮೆ ಮಾತ್ರ ನೀರು ಬಿಡುತ್ತಿದ್ದು, ನೀರು ಸರಬರಾಜು ಮಾಡುವ ಪೈಪ್ ಚರಂಡಿಯಲ್ಲಿರು ವುದರಿಂದ ಕೆಲವು ಕಡೆ ಪೈಪ್ ಒಡೆದು ಚರಂಡಿ ನೀರು ಸೇರಿ ಕಲುಷಿತಗೊಳ್ಳುತ್ತಿದೆ. ಈ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ದೂರಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಮ್ಮ ಯಾವುದೇ ಮನವಿಗೆ ಸ್ಪಂದಿಸುತ್ತಿಲ್ಲ. ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಗ್ರಾಮದ ಸತೀಶ್, ಅಭಿಜಿತ್ ಸೇರಿದಂತೆ ಇತರರು ಅಸಮಾಧಾನ ವ್ಯಕ್ತಪಡಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಕಸವಿಲೇವಾರಿಗೆ ನೀಡಿದ ವಾಹನವು ಕೂಡ ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ. ಗ್ರಾಮದಲ್ಲಿ ಬೀದಿ ದೀಪಗಳನ್ನು ಅಳವಡಿಸಿಲ್ಲ ಎಂದು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ವಿರುದ್ಧವೂ ಆರೋಪಿಸಿದರು.
ಇದರೊಂದಿಗೆ ತೋಳೂರುಶೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅನೇಕ ವರ್ಷಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದರೂ ಪೊಲೀಸ್, ಅಬಕಾರಿ ಇಲಾಖೆ, ಪಂಚಾಯಿತಿ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಮದ್ಯಪಾನ ಮಾಡಿ ಅದರ ಬಾಟಲ್, ಪ್ಯಾಕೆಟ್ಗಳನ್ನು ಸುಭಾಷ್ ನಗರ ವ್ಯಾಪ್ತಿಯ ಚರಂಡಿಯಲ್ಲಿ ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದರು.
ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು. ಈ ಸಂದರ್ಭ ಗ್ರಾಮಾಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಚಂದನ್, ಪ್ರವೀಣ್, ಅಭಿಜಿತ್, ಸುರೇಶ್, ಬಸವರಾಜ, ಮಂಜುನಾಥ್, ಮಹೇಶ್, ವಿನ್ಸೆಂಟ್ ಸೇರಿದಂತೆ ಇತರರು ಉಪಸ್ಥಿತರಿದ್ದರು.