ಸೋಮವಾರಪೇಟೆ, ಡಿ. ೨೬: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಕಾನೂನು-ಕಾಯ್ದೆಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖಾ ಸಿಬ್ಬಂದಿ ಶಿವಕುಮಾರ್ ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಸಾಮಾಜಿಕ ಜಾಲತಾಣಗಳ ಉಪಯೋಗ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಒದಗಿಸಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಸಹಾಯವಾಣಿ ಕೇಂದ್ರದ ಬಿ.ಕೆ. ಕುಮಾರಿ, ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಬಗ್ಗೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಣ್ಣಮ್ಮ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಕುಶಾಲ, ಸದಸ್ಯರಾದ ವಸಂತ, ಸಹಾಯವಾಣಿ ಕೇಂದ್ರದ ಯೋಗೇಶ್, ಪ್ರವೀಣ್, ಪ್ರೌಢಶಾಲಾ ಶಿಕ್ಷಕಿ ಹೇಮಾವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.