ಮಡಿಕೇರಿ, ಡಿ. ೨೬: ಕೊಡಗು ಜಿಲ್ಲೆಯ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಮುಂದಿನ ೧೫ ದಿನಗಳೊಳಗೆ ರಸ್ತೆ ದುರಸ್ತಿ ಕಾರ್ಯ ಆರಂಭಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಕೊಡಗು ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರಿಗೆ ಮನವಿ ಪತ್ರ ಸಲ್ಲಿಸಿದ ಕೊರವೇ ಅಧ್ಯಕ್ಷ ಪವನ್ ಪೆಮ್ಮಯ್ಯ ಜಿಲ್ಲೆಯ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ವಿವರಿಸಿದರು. ಗ್ರಾಮೀಣ ರಸ್ತೆಗಳು ಸೇರಿದಂತೆ ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯ ರಸ್ತೆಗಳು ಕೂಡ ಹೊಂಡ, ಗುಂಡಿಗಳಿAದ ಕೂಡಿವೆ. ರಸ್ತೆಗಳು ಅಭಿವೃದ್ಧಿಗೆ ಪೂರಕವೆಂದು ಕೇಂದ್ರ ಸರಕಾರ ಹೇಳಿಕೊಳ್ಳುತ್ತಿದೆ. ಆದರೆ ಕೊಡಗಿನ ಪರಿಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ, ಹದಗೆಟ್ಟ ರಸ್ತೆಗಳಿಂದ ಅಭಿವೃದ್ಧಿ ಕಾರ್ಯಗಳು ವಿಳಂಬವಾಗುತ್ತಿದೆ ಮತ್ತು ಸಾರ್ವಜನಿಕರ ಕೆಲಸಗಳಿಗೂ ಅಡ್ಡಿಯಾಗಿದೆ.

ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ ಎಂದು ಘೋಷಣೆ ಮಾಡಲಾಗುತ್ತಿದೆಯೇ ಹೊರತು ಕಳೆದ ಮೂರು ವರ್ಷಗಳಿಂದ ಸಮಪರ್ಕವಾಗಿ ಯಾವ ರಸ್ತೆಯೂ ದುರಸ್ತಿಯಾಗಿಲ್ಲವೆಂದು ಪವನ್ ಪೆಮ್ಮಯ್ಯ ಆರೋಪಿಸಿದರು.

ಮುಂದಿನ ೧೫ ದಿನಗಳೊಳಗೆ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮಡಿಕೇರಿಯ ಗಾಂಧಿ ಮಂಟಪದ ಎದುರು ಕೊಡಗು ರಕ್ಷಣಾ ವೇದಿಕೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಐದು ತಾಲೂಕುಗಳ ಕೊರವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳಲಿದ್ದಾರೆ. ಜಿಲ್ಲೆಯ ಎಲ್ಲಾ ನಾಗರಿಕರು ಪ್ರತಿಭಟನೆಗೆ ಬೆಂಬಲ ಸೂಚಿಸಿ ರಸ್ತೆಗಳ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಅವರು ಮನವಿ ಮಾಡಿದರು. ಮನವಿ ಸಲ್ಲಿಸುವ ಸಂದರ್ಭ ಕೊರವೇ ನಿರ್ದೇಶಕ ರವಿ ಪಾಪು ಮತ್ತಿತರರು ಹಾಜರಿದ್ದರು.