ಮಡಿಕೇರಿ, ಡಿ.೨೮:ಕೊಡಗು ಜಿಲ್ಲೆಯ ಮಾದಾಪುರ ಬಳಿ ಜಂಬೂರಿನಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಲಾಗಿರುವ ೧೦೬ ಮನೆಗಳನ್ನು ವರ್ಚುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ೨೦೧೮ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ಮುಂದಾಗಿ, ವಸತಿ ಕಲ್ಪಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರದ ಜೊತೆ ಇನ್ಫೋಸಿಸ್ ಪ್ರತಿಷ್ಠಾನವು ಕೈಜೋಡಿಸಿರುವುದು ಮಾದರಿ ಕೆಲಸವಾಗಿದೆ.

(ಮೊದಲ ಪುಟದಿಂದ) ಪ್ರವಾಹದಿಂದ ನಿರಾಶ್ರಿತರಾದ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿ ಕೊಡುತ್ತಿರುವುದು, ಸಂತ್ರಸ್ತ ಕುಟುಂಬಗಳಿಗೆ ಆಶಾದಾಯಕ ವಾಗಿದೆ; ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ಕುಟುಂಬ, ಶಾಲೆ, ಊರು ಯಾವುದನ್ನು ಪ್ರತಿಷ್ಠಾನದ ಅಧ್ಯಕ್ಷರು ಮರೆತಿಲ್ಲ ಎಂದು ಮುಖ್ಯಮಂತ್ರಿ ಶ್ಲಾಘಿಸಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ಇನ್ಫೋಸಿಸ್ ಪ್ರತಿಷ್ಠಾನದ ಅಧಕ್ಷೆ ಸುಧಾಮೂರ್ತಿ ಅವರು ಕೊಡಗು ಜಿಲ್ಲೆಯ ಜಂಬೂರಿನಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ವತಿಯಿಂದ ೨೦೦ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇದರಲ್ಲಿ ಪೂರ್ಣಗೊಂಡಿರುವ ೧೦೬ ಮನೆಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ೨೦೧೮ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಮನೆ ನಿರ್ಮಿಸಲಾಗಿದೆ ಎಂದರು. ಇನ್ಫೋಸಿಸ್ ಪ್ರತಿಷ್ಠಾನವು ‘ಬಹುಜನ ಹಿತಾಯ, ಬಹುಜನ ಸುಖಾಯ; ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸುಧಾಮೂರ್ತಿ ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾದಪುರ ಬಳಿ ಜಂಬೂರಿನಲ್ಲಿ ಇನ್ಫೋಸಿಸ್ ಪ್ರತಿಷ್ಠಾನದಿಂದ ನಿರ್ಮಿಸಲಾಗುತ್ತಿರುವ ೨೦೦ ಮನೆಗಳಲ್ಲಿ ೧೦೬ ಮನೆಗಳು ಪೂರ್ಣಗೊಂಡಿದ್ದು ಉದ್ಘಾಟನೆಯಾಗುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ಜಂಬೂರಿನಲ್ಲಿ ನಿರ್ಮಿಸಲಾಗುತ್ತಿರುವ ವಸತಿ ಬಡಾವಣೆಯಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯವನ್ನು ಕೂಡಲೇ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ವರ್ಚುವಲ್ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಇನ್ಫೋಸಿಸ್ ಪ್ರತಿಷ್ಠಾನದ ಪ್ರಮುಖರು ಇತರರು ಪಾಲ್ಗೊಂಡಿದ್ದರು.