ಸಿದ್ದಾಪುರ, ಡಿ. ೨೮: ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ಸಂಯೋಜಿತ ಕೊಡಗು ಜಿಲ್ಲಾ ೪ನೇ ಹಕ್ಕೊತ್ತಾಯ ಸಮಾವೇಶ ಜ. ೮ ರಂದು ಪೂರ್ವಾಹ್ನ ೧೧.೦೦ ಗಂಟೆಗೆ ಸಿದ್ದಾಪುರದ ಸೆಂಟಿನರಿ ಸಭಾಂಗಣ ದಲ್ಲಿ ನಡೆಯಲಿದೆ ಎಂದು ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು ಗ್ರಾ.ಪಂ ಗಳಲ್ಲಿ ದುಡಿಯುವ ಕಾರ್ಮಿಕರು ಚುನಾವಣಾ ಸಂದರ್ಭದಲ್ಲಿ ಹಗಲಿರುಳು ದುಡಿಯುತ್ತಿದ್ದಾರೆ. ಅಲ್ಲದೇ ಗ್ರಾಮ ಸಭೆ, ಮಳೆಗಾಲ, ಕೊರೊನಾದಂತಹ ಸಂದರ್ಭಗಳಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರವು ಇವರುಗಳಿಗೆ ಕಡಿಮೆ ಮೊತ್ತದ ಮಾಸಿಕ ವೇತನ ನೀಡುತ್ತಿರುವುದು ಸರಿಯಾದ ಕ್ರಮವಲ್ಲವೆಂದು ಆರೋಪಿಸಿದರು. ಅಲ್ಲದೇ ಸಿಬ್ಬಂದಿಗಳಿಗೆ ಮೂಲಸೌಕ ರ್ಯಗಳು ಕೂಡ ಸಮರ್ಪಕವಾಗಿ ನೀಡದೇ ಕಾರ್ಮಿಕರನ್ನು ಹೆಚ್ಚಿನ ಸಮಯ ದುಡಿಸಿಕೊಳ್ಳುತ್ತಿರುವುದು ಖಂಡನೀಯವೆAದರು. ಇದಲ್ಲದೇ ಹಲವು ಗ್ರಾ.ಪಂ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಮಾಸಿಕ ವೇತನವನ್ನು ಸಮರ್ಪಕವಾಗಿ ನೀಡದೇ ಕನಿಷ್ಟ ವೇತನವನ್ನು ಕೂಡ ಪಾವತಿಸದೇ ಅವರ ತುಟ್ಟಿ ಭತ್ಯೆಗಳನ್ನು ನೀಡದೇ ಸತಾಯಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಸರ್ಕಾರವು ಈ ಬಗ್ಗೆ ಗಮನಹರಿಸಬೇಕೆಂದು ಭರತ್ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಗ್ರಾ.ಪಂ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜ.೮ರಂದು ಸಿದ್ದಾಪುರದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮುಂದಿನ ದಿನಗಳಲ್ಲಿ ಹೋರಾಟವನ್ನು ರೂಪಿಸಲು ಸಮಾವೇಶದಲ್ಲಿ ಚರ್ಚಿಸಲಾಗುವು ದೆಂದು ತಿಳಿಸಿದರು.

ಸಮಾವೇಶವನ್ನು ಪಂಚಾಯಿತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ರಾಮಕೃಷ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ.ಪಿ.ಸಿ.ಸಿ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಎಸ್ ಪೊನ್ನಣ್ಣ, ವೀರಾಜಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ರೀನಾ ತುಳಸಿ, ನೆಲ್ಯಹುದಿಕೇರಿ ಗ್ರಾ.ಪಂ ಅಧ್ಯಕ್ಷ ಸಾಬೂ ವರ್ಗೀಸ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ ಇನ್ನಿತರರು ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ ಪಂಚಾಯಿತಿ ನೌಕರರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದರು. ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಗೌರವಾಧ್ಯಕ್ಷ ಹೆಚ್.ಬಿ. ರಮೇಶ್, ಕಾರ್ಯಾಧ್ಯಕ್ಷ ಮಹದೇವ್, ಸಂಘಟನೆಯ ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಎಂ.ಬಿ. ಹರೀಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಹೆಚ್.ಜಿ. ನವೀನ್ ಕುಮಾರ್ ಹಾಜರಿದ್ದರು.