ಮುಳ್ಳೂರು, ಜ. ೧: ಸಮೀಪದ ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರ-೧೦೯೮ ಕುಶಾಲನಗರ ವತಿಯಿಂದ ಮಕ್ಕಳ ಕಾನೂನು ಕಾಯ್ದೆಗಳ ವಿಶೇಷ ಅರಿವು ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ಶನಿವಾರಸಂತೆ ಪೊಲೀಸ್ ಠಾಣಾ ಸಿಬ್ಬಂದಿ ಬೋಪಯ್ಯ ಮಾಹಿತಿ ನೀಡಿ, ಮಕ್ಕಳ ಮೇಲೆ ಹಲವು ರೀತಿಯಲ್ಲಿ ಲೈಂಗಿಕ ದೌರ್ಜನ್ಯಗಳಾಗುತ್ತಿದ್ದು, ಇದನ್ನು ತಡೆಗಟ್ಟಲು ೨೦೧೨ರಲ್ಲಿ ಪೋಕ್ಸೋ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆ ಬಗ್ಗೆ ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಅರಿವು ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಸಂದರ್ಭ ಮಕ್ಕಳು, ಪೋಷಕರು ಮತ್ತು ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ೧೦೨ ಸಂಖ್ಯೆಗೆ ಉಚಿತ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು. ೧೮ ವರ್ಷದೊಳಗಿನ ಮಕ್ಕಳು ವಾಹನ ಚಾಲನೆ ಮಾಡುವುದು ಅಪರಾಧವಾಗುತ್ತದೆ. ಇಂತಹ ಪ್ರಕರಣದಲ್ಲಿ ಮಕ್ಕಳ ಪೋಷಕರ ಮೇಲೆ ಪೊಲೀಸ್ ಇಲಾಖೆ ಕಾನೂನು ಕ್ರಮಕೈಗೊಂಡ ಬಳಿಕ ನ್ಯಾಯಾಲಯದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಡಬಾರದು ಎಂದು ರಸ್ತೆ ಸುರಕ್ಷತೆ ಹಾಗೂ ಮಾದಕ ವಸ್ತುಗಳ ಬಗ್ಗೆಯೂ ಮಾಹಿತಿ ನೀಡಿದರು.

ಮಕ್ಕಳ ಹಕ್ಕುಗಳ ಕುರಿತು ಮಕ್ಕಳ ಸಹಾಯವಾಣಿ ಕೇಂದ್ರದ ಬಿ.ಕೆ.ಕುಮಾರಿ ಮಾಹಿತಿ ನೀಡಿ, ಮಕ್ಕಳಿಗೆ ಶಿಕ್ಷಣ ಸೇರಿದಂತೆÀ ಮಕ್ಕಳ ಸುರಕ್ಷತೆಗೋಸ್ಕರ ವಿವಿಧ ಕಾಯ್ದೆಗಳಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಇವುಗಳ ಬಗ್ಗೆ ಅರಿವು ಹೊಂದುವ ಅಗತ್ಯತೆ ಇದೆ ಎಂದರು. ಮಕ್ಕಳ ಶಿಕ್ಷಣಕ್ಕಾಗಿ ಸರಕಾರದಿಂದ ಉಚಿತ ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳಿದ್ದು ಇವುಗಳನ್ನು ಸದುಪಯೋಗಿಸಿ ಕೊಳ್ಳುವಂತೆ ಸಲಹೆ ನೀಡಿದರು.

ಕೊಡ್ಲಿಪೇಟೆ ಪ.ಪೂ. ಕಾಲೇಜು ಪ್ರಾಂಶುಪಾಲ ಜಗದೀಶ್ ಬಾಬು, ಮಕ್ಕಳ ವಿದ್ಯಾಭ್ಯಾಸ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಎಸ್.ಎಸ್. ನಾಗರಾಜ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್ ಮುಂತಾದವರಿದ್ದರು.