ಸೋಮವಾರಪೇಟೆ, ಜ.೧೦: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿರುವ ತಾರತಮ್ಯವನ್ನು ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಕ್ರಮವಹಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಸರ್ಕಾರಿ ನೌಕರರು ಎನ್.ಪಿ.ಎಸ್.ಗೆ ಒಳಪಟ್ಟಿದ್ದಾರೆ. ನೂತನ ಪಿಂಚಣಿ ಯೋಜನೆಯಿಂದ ಬಹುತೇಕ ಕುಟುಂಬಗಳಿಗೆ ಭದ್ರತೆ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್ ಒತ್ತಾಯಿಸಿದರು.

ರಾಷ್ಟಿçÃಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಈ ಹಿಂದಿನ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ತತ್ವವನ್ನು ಪಾಲಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರದ ಮಾದರಿಯಲ್ಲಿಯೆ ಸರಿಸಮ ವೇತನ ನೀಡಬೇಕು ಎಂದು ನೌಕರರು ಆಗ್ರಹಿಸಿದರು.

ರಾಜ್ಯದಲ್ಲಿ ಪ್ರಸ್ತುತ ಎರಡೂವರೆ ಲಕ್ಷ ಹುದ್ದೆಗಳು ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಕೆಲವು ಇಲಾಖೆಗಳಲ್ಲಿ ಸಿಬ್ಬಂದಿಗಳು ಹೆಚ್ಚಿನ ಕಾರ್ಯದೊತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹಲವು ವಿನೂತನ ಯೋಜನೆಗಳು ನಿಗದಿತ ಅವಧಿಯಲ್ಲಿ ಜನಸಾಮಾನ್ಯರಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಹಲವಾರು ವರ್ಷಗಳಿಂದ ಯಾವುದೇ ಹುದ್ದೆಗಳು ಭರ್ತಿ ಆಗಿಲ್ಲ. ಕೆಲವರಿಗೆ ಬಡ್ತಿ ದೊರೆಯುತ್ತಿಲ್ಲ. ಇವೆಲ್ಲಾ ಬೇಡಿಕೆಗಳನ್ನು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ರಂಜನ್, ನೌಕರರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳೂ ಸೇರಿದಂತೆ ಸಂಬAಧಿಸಿದ ಇಲಾಖಾ ಸಚಿವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ಸಂಘದ ಕಾರ್ಯದರ್ಶಿ ನಾಗೇಶ್, ಪದಾಧಿಕಾರಿಗಳಾದ ವಿ.ಜಿ.ದಿನೇಶ್, ಎಸ್.ಆರ್.ಗೋಪಿನಾಥ್, ಎನ್.ಲೋಹಿತ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.