ಮಡಿಕೇರಿ, ಜ. ೧೪: ಕಸ್ತೂರಿ ರಂಗನ್ ವರದಿಗೆ ವಿರೋಧ ವ್ಯಕ್ತಪಡಿಸಿದ್ದ ಜಿಲ್ಲೆಯ ಜನಪ್ರತಿನಿಧಿಗಳು ಇದೀಗ ಮೌನಕ್ಕೆ ಜಾರಿದ್ದಾರೆ ಎಂದು ಆರೋಪಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದಿ) ಜಿಲ್ಲಾ ಸಮಿತಿ ಸದಸ್ಯ ಈ.ರಾ ದುರ್ಗಾಪ್ರಸಾದ್, ವರದಿ ಅನುಷ್ಠಾನಗೊಂಡರೆ ಜಿಲ್ಲೆಯ ಜನರು ನಿತ್ಯ ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ಸಮಿತಿಯ ವರದಿಯನ್ನು ಪಶ್ಚಿಮ ಘಟ್ಟದ ಜಿಲ್ಲೆಗಳ ಜನತೆಗೆ ಯಾವುದೇ ಸಮಸ್ಯೆಯಾಗದಂತೆ ಜಾರಿಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಅದಕ್ಕೆ ಪೂರಕವಾಗಿ ಸಮಿತಿಯೊಂದನ್ನು ರಚಿಸಿದೆ. ವರದಿಯಲ್ಲಿನ ಶಿಫಾರಸ್ಸನ್ನು ಪರಾಮರ್ಶೆ ನಡೆಸಿ ಸೂಕ್ತ ವರದಿ ಕೊಡುವ ಜವಾಬ್ದಾರಿಯನ್ನು ಸಮಿತಿಗೆ ನೀಡಲಾಗಿದೆ. ಆ ಸಮಿತಿಯಲ್ಲಿ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ನೇಮಿಸಿಕೊಳ್ಳುವ ಬದಲು ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳ ಪ್ರತಿನಿಧಿಗಳನ್ನು ನೇಮಿಸಬೇಕಿತ್ತು. ಲೋಕಸಭಾ ಚುನಾವಣೆಗೂ ಮುನ್ನ ಮತದಾರರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದೆ ವಂಚಿಸುತ್ತಾ ಬಂದಿರುವ ಪ್ರತಾಪ್ ಸಿಂಹ ಅವರಿಂದ ಕಸ್ತೂರಿ ರಂಗನ್ ವಿಚಾರದಲ್ಲಿ ಜನರಿಗೆ ನ್ಯಾಯ ದೊರಕುತ್ತದೆ ಎಂದು ಭಾವಿಸುವುದು ಮೂರ್ಖತನ ಎಂದರು.

ಈ ಹಿಂದೆ ಕಸ್ತೂರಿ ರಂಗನ್ ವರದಿಯ ವಿರುದ್ಧ ಜಿಲ್ಲೆಯ ಶಾಸಕರಾದ ಕೆ.ಜಿ ಬೋಪಯ್ಯ, ಅಪ್ಪಚ್ಚು ರಂಜನ್ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವೀರಾವೇಶದ ಮಾತುಗಳನ್ನಾಡಿದ್ದರು. ಅದನ್ನು ಅವರೆಲ್ಲಾ ಮರೆತಂತಿದೆ. ಬಿಜೆಪಿ ಮುಖಂಡರು ಕೇವಲ ಬಾಯಿ ಮಾತಿಗಷ್ಟೇ ಸೀಮಿತರಾಗಿದ್ದಾರೆ. ಜಿಲ್ಲೆಯ ಜನತೆ ಕಸ್ತೂರಿ ರಂಗನ್ ವರದಿಯ ವಿರುದ್ಧ ಧ್ವನಿ ಎತ್ತಬೇಕು. ಸಮಿತಿಯ ಶಿಫಾರಸ್ಸನ್ನು ಅನುಷ್ಠಾನಕ್ಕೆ ತರದಂತೆ ಒತ್ತಡ ಹೇರಬೇಕು. ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ರಮೇಶ್ ಹಾಜರಿದ್ದರು.