ಸೋಮವಾರಪೇಟೆ, ಜ. 18: ಬಾಲ ಕಾರ್ಮಿಕ ಮುಕ್ತ ತಾಲೂಕು ಮಾಡುವಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು. ಇದರೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಾಲೂಕು ತಹಶೀಲ್ದಾರ್ ಗೋವಿಂದ ರಾಜು ಹೇಳಿದರು.
ತಾಲೂಕು ಕಚೇರಿ ಸಭಾಂಗಣ ದಲ್ಲಿ ನಡೆದ ಬಾಲಕಾರ್ಮಿಕರ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಿನ ಟಾಸ್ಕ್ಫೋರ್ಸ್ ತಂಡ ಪ್ರತಿ ತಿಂಗಳು ಬಾಲ ಕಾರ್ಮಿಕರ ತಪಾಸಣೆ ಮಾಡಬೇಕಾಗಿದೆ. ತಪಾಸಣೆ ನಡೆಸುವ ಸಂದರ್ಭದಲ್ಲಿ ಬಾಲ ಕಾರ್ಮಿಕರು ಕಂಡು ಬಂದರೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಿಗೆ ನಿಗದಿತ ನಮೂನೆಯಲ್ಲಿ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿದರು.ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ಮಾಹಿತಿಯನ್ನು ಪಂಚಾಯಿತಿ ಸ್ವಚ್ಛತಾ ವಾಹನಗಳ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಬೇಕು. ಮಕ್ಕಳ ಸಹಾಯವಾಣಿ ಚೈಲ್ಡ್ಲೈನ್ ಸಂಖ್ಯೆ-1098 ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು. ಮಕ್ಕಳು ಶಾಲೆಗೆ ದೀರ್ಘ ಗೈರಾಗುತ್ತಿರುವ ಬಗೆಗಿನ ಮಾಹಿತಿಯನ್ನು ಶಿಕ್ಷಕರು ಕಾರ್ಮಿಕ ಇಲಾಖೆಗೆ ನೀಡಬೇಕು ಎಂದರು.
ಹಿರಿಯ ಕಾರ್ಮಿಕ ನಿರೀಕ್ಷಕರಾದ ಲೀನಾ, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಿರಾಜ್ ಅಹಮ್ಮದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಎಂ. ಅಣ್ಣಯ್ಯ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ರವಿ. ಮತ್ತಿತರರು ಉಪಸ್ಥಿತರಿದ್ದರು.