ಸೋಮವಾರಪೇಟೆ, ಜ.೨೦: ಪಟ್ಟಣದ ಹೈಟೆಕ್ ಮಾರುಕಟ್ಟೆ ಆವರಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಐ.ಬಿ. ಸಮೀಪದ ನಿವಾಸಿ ಶಮಂತ್ ಬಂಧಿತ ಆರೋಪಿ. ಪಟ್ಟಣದ ಮಾರುಕಟ್ಟೆಯಲ್ಲಿ ಗಾಂಜಾ ತುಂಬಿದ್ದ ೧೦ ಪ್ಯಾಕೆಟ್ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ಕಾರ್ಯಾಚರಣೆ ನಡೆಸಿ, ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನಿಂದ ಗಾಂಜಾ ತಂದು ಪಟ್ಟಣ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯ ಬಗ್ಗೆ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಾಂಜಾ ಸಹಿತ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸೋಮವಾರಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ಠಾಣಾಧಿಕಾರಿ ವಿರೂಪಾಕ್ಷ, ಸಿಬ್ಬಂದಿಗಳಾದ ನವೀನ್, ಮಂಜು, ಶಿವಕುಮಾರ್, ಬಸಪ್ಪ ಘನಿ ಅವರುಗಳು ಭಾಗವಹಿಸಿದ್ದರು.