ಗೋಣಿಕೊಪ್ಪಲು, ಜ. ೨೫ : ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸಮಿತಿಯ ಪದಾಧಿಕಾರಿಗಳ ಹಾಗೂ ಹುದಿಕೇರಿ ಗ್ರಾಮಸ್ಥರ ಸೂಚನೆ ಹಾಗೂ ಸಲಹೆ ಮೇರೆಗೆ ಗಣರಾಜ್ಯೋತ್ಸವ ದಿನದಂದು ಕೊಡಗು ಜಿಲ್ಲಾ ರೈತ ಸಂಘದ ವತಿಯಿಂದ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಯ ಮುಂದೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ.

ಹುದಿಕೇರಿಯ ರೈತ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ಈ ನಿರ್ಧಾರ ಪ್ರಕಟಿಸಿದರು. ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಕಾಯ್ದೆ ಇತ್ತಿಚೀನ ದಿನಗಳಲ್ಲಿ ಕೆಲವೇ ಕೆಲವು ದಲಿತ ಮುಖಂಡರ ಕುಮ್ಮಕ್ಕಿನಿಂದ ದುರುಪಯೋಗವಾಗುತ್ತಿದೆ.

ಇಂತಹ ಮೊಕದ್ದಮೆಯಿಂದ ಅಮಾಯಕ ರೈತರು ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ, ಇಂತವರ ಮೇಲೆ ಜಿಲ್ಲಾಡಳಿತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ರೈತ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಬಗ್ಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕ ಹಿಂಪಡೆಯಲಾಗಿದೆ.

ಸಭೆಯಲ್ಲಿ ರೈತರ ಬೆಳೆ ಪರಿಹಾರ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಜಿಲ್ಲಾ ಕಾರ್ಯದರ್ಶಿ ಅಜ್ಜಮಾಡ ಟಿ. ಚಂಗಪ್ಪ, ತಾಲ್ಲೂಕು ಅಧ್ಯಕ್ಷ ಬಾಚಮಾಡ ಭವಿಕುಮಾರ್, ಹುದಿಕೇರಿ ಹೋಬಳಿ ಅಧ್ಯಕ್ಷ ಚಂಗುಲAಡ ಸೂರಜ್,ಶ್ರೀಮಂಗಲ ಹೋಬಳಿ ಅಧ್ಯಕ್ಷ ಚಟ್ಟಂಗಡ ಕಂಬ ಕಾರ್ಯಪ್ಪ, ಹುದಿಕೇರಿ ಗ್ರಾಮದ ಗ್ರಾಮಸ್ಥರು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.