ಶಿವಮೊಗ್ಗದ ಕಾಲೇಜಿನಲ್ಲಿ ಕಲ್ಲು ತೂರಾಟ

ಶಿವಮೊಗ್ಗ, ಫೆ. ೮: ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿಜಾಬ್ - ಕೇಸರಿ ಹೋರಾಟದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಿದ್ದು, ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಸೆಕ್ಷನ್ ೧೪೪ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಎನ್.ಜೆ. ನಾಗರಾಜ್ ಆದೇಶಿಸಿದ್ದಾರೆ. ಶಿವಮೊಗ್ಗದಲ್ಲಿ ಹಿಜಾಬ್ ಪರ-ವಿರೋಧ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿದ್ಯಾರ್ಥಿಗಳು ಪ್ರತಿಭಟನೆಯ ವೇಳೆ ಪರಸ್ಪರ ಕಲ್ಲು-ತೂರಾಟ ಮಾಡುತ್ತಿದ್ದು, ಇದನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಯೋಗಿಸಿದ್ದಾರೆ. ಪ್ರತಿಭಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.

ಹಿಮಪಾತಕ್ಕೆ ೭ ಯೋಧರ ಸಾವು

ಗುವಾಹತಿ, ಫೆ. ೮: ಅರುಣಾಚಲ ಪ್ರದೇಶದಲ್ಲಿ ಕಳೆದ ಭಾನುವಾರ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿದ್ದ ೭ ಭಾರತೀಯ ಸೈನಿಕರು ಮೃತಪಟ್ಟಿದ್ದಾರೆ. ಹಿಮಪಾತದಲ್ಲಿ ಸಿಲುಕಿದ್ದ ಎಲ್ಲಾ ಏಳು ಯೋಧರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಸ್ಸಾಂನ ತೇಜ್‌ಪುರ ಮೂಲದ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ ಅವರು ಹೇಳಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಈಗ ಮುಕ್ತಾಯಗೊಂಡಿದೆ. ಹಿಮಪಾತದ ಸ್ಥಳದಿಂದ ಎಲ್ಲಾ ಏಳು ಸೈನಿಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿಯೊಬ್ಬರ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಎಲ್ಲಾ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಅರುಣಾಚಲ ಪ್ರದೇಶದ ಕಮೆಂಗ್ ಸೆಕ್ಟರ್‌ನ ಎತ್ತರದ ಪ್ರದೇಶದಲ್ಲಿ ಹಿಮಪಾತ ಸಂಭವಿಸಿತ್ತು. ಈ ವೇಳೆ ಏಳು ಭಾರತೀಯ ಸೇನೆಯ ಯೋಧರು ಸಿಲುಕಿದ್ದರು. ಈ ಸೇನಾ ಸಿಬ್ಬಂದಿಗಳು ಗಸ್ತು ತಿರುಗುವ ತಂಡದ ಭಾಗವಾಗಿದ್ದರು.

ಪ್ರಿಯಾಂಕ ಗಾಂಧಿ ವಿರುದ್ಧ ದೂರು

ಪಣಜಿ, ಫೆ. ೮: ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸಿಗರು ಕೋವಿಡ್ ನಿಬಂಧನೆಗಳನ್ನು ಅನುಸರಿಸಿಲ್ಲ, ಬೆಂಬಲಿಗರು ಮತ್ತು ನಾಯಕರು ಮಾಸ್ಕ್ಗಳನ್ನು ಧರಿಸಿಲ್ಲ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ ಎಂದು ಟಿಎಂಸಿ ದೂರಿನಲ್ಲಿ ಹೇಳಿದ್ದು, ಇನ್ನು ಮುಂದೆ ಗೋವಾದಲ್ಲಿ ಯಾವುದೇ ಪ್ರಚಾರ ನಡೆಸದಂತೆ ಪ್ರಿಯಾಂಕಾ ಗಾಂಧಿ ಅವರ ಮೇಲೆ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿದೆ.

ಪಂಜಾಬ್ ಚುನಾವಣೆ-ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಚಂಡೀಗಢ, ಫೆ. ೮: ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಎಲ್ಲಾ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ. ಇದಲ್ಲದೆ ಬಿಜೆಪಿ ‘ಮೆಹನತ್ ದ ಪಕ್ಕಾ ಮುಲ್' ಭರವಸೆಯನ್ನು ನೀಡಿತು. ಇದರ ಅಡಿಯಲ್ಲಿ ಹಣ್ಣುಗಳು, ತರಕಾರಿಗಳು, ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳನ್ನು ಬೆಳೆಯುವ ರೈತರಿಗೆ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ವಿಸ್ತರಣೆ ಮಾಡುವ ಭರವಸೆ ನೀಡಲಾಗಿದೆ. ಬೆಳೆ ವೈವಿಧ್ಯತೆಯನ್ನು ಉಳಿಸಿಕೊಳ್ಳಲು ಮತ್ತು ಅದನ್ನು ಹೆಚ್ಚು ಲಾಭದಾಯಕವಾಗಿಸಲು ಬಿಜೆಪಿ ಮೈತ್ರಿಯು ಕೃಷಿಗಾಗಿ ೫,೦೦೦ ಕೋಟಿ ರೂಪಾಯಿಗಳ ಪ್ರತ್ಯೇಕ ವಾರ್ಷಿಕ ಬಜೆಟ್ ಮಂಡಿಸುವ ಭರವಸೆ ನೀಡಿದೆ. ರಾಜ್ಯದಲ್ಲಿ ಒಂದು ಲಕ್ಷ ಎಕರೆ ಶಾಮಲತ್ ಭೂಮಿಯನ್ನು ಗ್ರಾಮೀಣ ಭೂರಹಿತ ರೈತರಿಗೆ ಸಾಗುವಳಿ ಮಾಡಲು ಹಂಚಿಕೆ ಮಾಡಲಾಗುವುದು ಎಂದು ಬಿಜೆಪಿ ನೇತೃತ್ವದ ಮೈತ್ರಿಕೂಟ ಭರವಸೆ ನೀಡಿದೆ. ಅಲ್ಲದೆ, ರಾಜ್ಯದ ಪ್ರತಿಯೊಬ್ಬ ಭೂರಹಿತ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ಯೋಜನೆಯಡಿ ವಾರ್ಷಿಕ ೬,೦೦೦ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದೆ.

ರಸ್ತೆ ಅಪಘಾತದಲ್ಲಿ ಮೂವರು ಸಾವು

ಚಿತ್ರದುರ್ಗ, ಫೆ. ೮: ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವ್ನಪ್ಪಿದ್ದಾರೆ. ಜಿಲ್ಲೆಯ ಹಿರಿಯೂರು ತಾಲೂಕಿನ ಬೀರೇನಹಳ್ಳಿ ಗ್ರಾಮದ ಬಳಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರು ವಿಶಾಲಾಕ್ಷಿ (೭೦), ರೇಣುಕಾದೇವಿ (೩೯) ಮತ್ತು ಸುಧೀಕ್ಷ (೧೭). ಗಾಯಗೊಂಡ ಪ್ರತೀಕ್ಷಾ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಮ್ಮ ಸಂಬAಧಿಕರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭದ್ರಾವತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತಾರಾಜ್ಯ ಜಲ ವಿವಾದ ಕುರಿತು ಸಭೆ

ನವದೆಹಲಿ, ಫೆ. ೮: ಅಂತಾರಾಜ್ಯ ಜಲ ವಿವಾದ ಕುರಿತು ರಾಷ್ಟç ರಾಜಧಾನಿ ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು. ನವದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆಸಿದ್ದು, ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲ ವ್ಯಾಜ್ಯಗಳ ಕುರಿತು ಕಾನೂನು ಹೋರಾಟಗಳ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು. ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ನೋಟಿಫಿಕೇಷನ್, ಮೇಕೆದಾಟು ವಿವಾದ, ನದಿ ಜೋಡಣೆ ಕುರಿತು ಕಾನೂನಾತ್ಮಕವಾಗಿ ರಾಜ್ಯ ಹೊಂದಬೇಕಾದ ನಿಲುವು ಸೇರಿದಂತೆ ಎಲ್ಲ ಆಯಾಮದಲ್ಲಿ ಚರ್ಚೆ ನಡೆಯಿತು. ರಾಜ್ಯದ ಪಾಲು ನಿರ್ಧರಿ ಸುವವರೆಗೆ ನದಿ ಜೋಡಣೆ ಯೋಜನೆಗೆ ಮುಂದಾಗದAತೆ ಜಲಶಕ್ತಿ ಸಚಿವಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿಯವರು, ನದಿ ಜೋಡಣೆಗೆ ಮುಂದಾಗದAತೆ ಜಲಶಕ್ತಿ ಸಚಿವಾಲಯಕ್ಕೆ ಆಕ್ಷೇಪಣೆ ಸಲ್ಲಿಸಲಾಗುತ್ತದೆ. ರಾಜ್ಯದ ಪಾಲಿನ ನೀರು ನಿರ್ಧರಿಸುವವರೆಗೂ ನದಿ ಜೋಡಣೆ ಯೋಜನೆ ಕೈಗೆತ್ತಿಕೊಳ್ಳದಂತೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲಿದೆ. ನದಿ ಜಲಾನಯನ ಪ್ರದೇಶದಲ್ಲಿ ಸಂಗ್ರಹವಾಗುವ ನೀರು, ರಾಜ್ಯದ ಅಗತ್ಯತೆಗಳು ಮತ್ತು ಸಮಾನ ಹಂಚಿಕೆಯನ್ನು ಆಧರಿಸಿ ರಾಜ್ಯದ ಪಾಲನ್ನು ನಿರ್ಧರಿಸಬೇಕು ಎಂದು ಹೇಳಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಭೇಟಿ ಮಾಡಿದ ಸಂದರ್ಭದಲ್ಲಿಯೂ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿದ್ದೇನೆ. ನದಿ ಜೋಡಣೆ ಯೋಜನೆಯಲ್ಲಿ ರಾಜ್ಯದ ಹಿತಾಸಕ್ತಿಯಲ್ಲಿ ಸರಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು. ಕಾನೂನು ತಜ್ಞರೊಂದಿಗೆ ನಡೆದ ಸಭೆಯಲ್ಲಿ ಮೇಕೆದಾಟು, ಮಹದಾಯಿ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಲಾಗಿದ್ದು, ರಾಜ್ಯದ ಉನ್ನತ ನಾಯಕ ರೊಂದಿಗೆ ಎಲ್ಲ ವಿವರಗಳ ಕುರಿತು ಚರ್ಚಿಸಲಾಗುವುದು. ಈ ಸಂಬAಧ ಪ್ರತಿಪಕ್ಷಗಳ ನಾಯಕರೊಂದಿಗೆ ಚರ್ಚಿಸುತ್ತೇವೆ ಮತ್ತು ಅವರ ಅಭಿಪ್ರಾಯಗಳನ್ನು ಸ್ವೀಕರಿಸಿ, ಒಗ್ಗಟ್ಟಿನಿಂದ ಯೋಜನೆಯ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.