ಮಡಿಕೇರಿ, ಫೆ.೮ : ಕಳೆದ ೨ ವರ್ಷಗಳಿಂದ ಕೋವಿಡ್ ಸೋಂಕಿನ ಕಾರಣದಿಂದ ಶಾಲಾ-ಕಾಲೇಜುಗಳು ಬಂದ್ ಆಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದರು. ಇದೀಗ ಕೋಮು ದ್ವೇಷದಿಂದ ಶಿಕ್ಷಣ ಸಂಸ್ಥೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿದ್ದು, ಪರೀಕ್ಷೆಗಳು ಸಮೀಪಿಸುತ್ತಿರುವ ಸಂದರ್ಭವೇ ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗುತ್ತಿರುವುದು ವಿಷಾದನೀಯವೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಅಸಮಾಧಾನ ವ್ಯಕ್ತಪಡಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ನಗರಾಧ್ಯಕ್ಷ ಕೆ.ಜಿ.ಪೀಟರ್ ದೇಶದ ಮುಂದಿನ ಭವಿಷ್ಯವಾಗಿರುವ ವಿದ್ಯಾರ್ಥಿಗಳ ಮನಸ್ಸನ್ನು ಕದಡಿ ಶೈಕ್ಷಣಿಕವಾಗಿ ಹಿನ್ನಡೆಯನ್ನು ಅನುಭವಿಸುವಂತೆ ಮಾಡಲಾಗುತ್ತಿದೆ. ತಕ್ಷಣ ಮುಖ್ಯಮಂತ್ರಿಗಳು ಮಧ್ಯ ಪ್ರವೇಶ ಮಾಡಿ ವಿವಾದವನ್ನು ಸುಖಾಂತ್ಯ ಗೊಳಿಸಬೇಕು. ಆ ಮೂಲಕ ವಿದ್ಯಾರ್ಥಿ ಗಳ ಭವಿಷ್ಯವನ್ನು ಉಜ್ವಲಗೊಳಿಸ ಬೇಕೆಂದು ಒತ್ತಾಯಿಸಿದ್ದಾರೆ.
ಅಲ್ಪಸಂಖ್ಯಾತರಿಗೆ ಮಾನಸಿಕ ವಾಗಿ ನೋವುಂಟು ಮಾಡಿದ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆ ಖಂಡನೀಯ ಎಂದಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ಮುಸಲ್ಮಾನರನ್ನು ಪಾಕಿಸ್ತಾನಕ್ಕೆ ಹೋಗಿ ಎಂದು ಅವಹೇಳನ ಮಾಡಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.
ಯಾವುದೇ ಅಭಿವೃದ್ಧಿ ಕಾರ್ಯಗಳ ಕುರಿತು ಚಿಂತನೆ ನಡೆಸಲು ಕೊಡಗಿಗೆ ಬಾರದ ಸಂಸದ ಪ್ರತಾಪ್ ಸಿಂಹ ಅವರು, ಕೋಮು ದ್ವೇಷದ ಹೇಳಿಕೆಗಳನ್ನು ನೀಡಲಷ್ಟೆ ಬರುತ್ತಿದ್ದಾರೆ ಎಂದು ಆರೋಪಿಸಿದ ಅವರು, ವನ್ಯಜೀವಿಗಳ ದಾಳಿಯಿಂದ ಬೆಳೆಗಾರರು ಕಷ್ಟ ನಷ್ಟಗಳನ್ನು ಅನುಭವಿಸುತ್ತಿದ್ದರೂ ಸಂಸದರಿಗೆ ಈ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದ್ದಾರೆ.