ಕೂಡಿಗೆ, ಫೆ. ೧೦: ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆಗೆ ಕರಾಟೆ ಸಹಕಾರಿಯಾಗುತ್ತದೆ ಎಂದು ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಓಬವ್ವ ಆತ್ಮರಕ್ಷಣೆ ಕಲೆಯ ಕೌಶಲ್ಯಗಳ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಮುಂದಿನ ಸಾಲಿನಲ್ಲಿ ಗಂಡು ಮಕ್ಕಳಿಗೆ ಕರಾಟೆ ತರಬೇತಿ ನೀಡುವ ಯೋಜನೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ ಅವರು, ಶಿಕ್ಷಣದ ಜೊತೆಗೆ ಆತ್ಮರಕ್ಷಣೆ ಈ ರೀತಿಯ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಮಾತನಾಡಿ, ಆತ್ಮರಕ್ಷಣೆ ಕಲೆಯ ಕೌಶಲ್ಯದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಮಹಿಳೆಯರು ಸಬಲೀಕರಣ ಹೊಂದಲು ಶಿಕ್ಷಣ ಪಡೆದರೆ ಇಡೀ ಕುಟುಂಬಕ್ಕೆ ಸಹಕಾರವಾಗುವುದು. ರಾಜ್ಯ ಸರ್ಕಾರದ ಒಳ್ಳೆಯ ಯೋಜನೆ ಇದಾಗಿದೆ.
ಮಹಿಳಾ ವಿದ್ಯಾರ್ಥಿಗಳು ತಮ್ಮ ಆತ್ಮವಿಶ್ವಾಸದಿಂದ ಗುರಿ ಮತ್ತು ಸಾಧನೆ ಮಾಡಲು ಪೂರಕ ವಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ ವಹಿಸಿದ್ದರು. ವೇದಿಕೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಜಿಲ್ಲಾ ಸಮನ್ವಯ ಅಧಿಕಾರಿ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿ ವರ್ಗದವರು ಹಾಜರಿದ್ದರು.
ಈ ಸಂದರ್ಭದಲ್ಲಿ ಓಬವ್ವ ಆತ್ಮರಕ್ಷಣೆ ಕಲೆಯ ಕೌಶಲ್ಯಗಳ ತರಬೇತಿ ಪಡೆದ ಶಾಲೆ ವಿದ್ಯಾರ್ಥಿಗಳು ಪ್ರದರ್ಶನವನ್ನು ನೀಡಿದರು.