ಮಡಿಕೇರಿ, ಫೆ. 13: ಜಿಲ್ಲಾ ಪಂಚಾಯಿತಿ ಯೋಜನೆಯಡಿ 2021-22ನೇ ಸಾಲಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹ ಧನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದೆ.
ಈ ಯೋಜನೆಯನ್ವಯ ಪ್ರಸ್ತುತ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2021 ರ ಜನವರಿ 1 ರ ನಂತರ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಅಥವಾ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು. ಕ್ರೀಡಾ ಪಂದ್ಯಾವಳಿಗಳಲ್ಲಿನ 2021 ರ ಜನವರಿ 1 ರಿಂದ ಡಿಸೆಂಬರ್ 31 ರ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.
ಅರ್ಜಿಯನ್ನು ಕ್ರೀಡಾ ಇಲಾಖೆಯಿಂದ ಪಡೆದು ತಾ. 21 ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.