ಸೋಮವಾರಪೇಟೆ, ಫೆ.೧೪: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ರೈತ ಸಂಘದಿAದ ಪಟ್ಟಣದ ಜೇಸೀ ವೇದಿಕೆಯಲ್ಲಿ ಧರಣಿ ನಡೆಸಲಾಯಿತು. ಕಳೆದ ಅಧಿವೇಶನ ಸಂದರ್ಭ ೧೭ ದಿನಗಳ ಕಾಲ ಧರಣಿ ನಡೆಸಿದ್ದರೂ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಧರಣಿನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈಗಾಗಲೇ ಜಿಲ್ಲೆಯ ಶಾಸಕರುಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನ ದೊರೆತಿಲ್ಲ. ರೈತರ ೧೦ ಹೆಚ್‌ಪಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವಂತೆ ಶಾಸಕ ರಂಜನ್ ಹಾಗೂ ಕೆ.ಜಿ. ಬೋಪಯ್ಯ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತರು ಅಸಮಾಧಾನ ಹೊರಹಾಕಿದರು.

ಕಾಫಿ ಬೆಳೆಗಾರರ ೧೦ ಎಚ್.ಪಿ.ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಬೇಕು. ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಅಧಿವೇಶನದಲ್ಲಿ ಕ್ರಮಕೈಗೊಳ್ಳಬೇಕೆಂದು ರೈತ ಸಂಘದ ಸಂಚಾಲಕ ಜಿ.ಎಂ. ಹೂವಯ್ಯ ಆಗ್ರಹಿಸಿದರು.

ಕೊಡಗಿನ ರೈತರ, ಕಾಫಿ ಬೆಳೆಗಾರರ ಸಮಸ್ಯೆಯನ್ನು ಸರ್ಕಾರಕ್ಕೆ ತಲುಪಿಸುವಲ್ಲಿ ಜನಪ್ರತಿನಿಧಿಗಳು ಸೋತಿದ್ದಾರೆ. ಈಗಲಾದರೂ ಅಧಿವೇಶನದಲ್ಲಿ ಸರ್ಕಾರಕ್ಕೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಜಿಲ್ಲೆಯ ರೈತರು ಹಾಗೂ ಬೆಳೆಗಾರರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದ ಅವರು, ಸರ್ಕಾರವು ರೈತರ ಬಗ್ಗೆ ತೋರುತ್ತಿರುವ ಮಲತಾಯಿ ಧೋರಣೆ ಖಂಡನೀಯ ಎಂದರು.

ಅತೀವೃಷ್ಟಿ, ಅಕಾಲಿಕ ಮಳೆಯಿಂದ ರೈತರ ಬದುಕು ಬೀದಿಗೆ ಬಂದಿದೆ. ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದ್ದು, ಮಾರುಕಟ್ಟೆಯಲ್ಲಿ ನ್ಯಾಯೋಚಿತ ಬೆಲೆ ಲಭಿಸುತ್ತಿಲ್ಲ. ಹೀಗಾಗಿ ಕೃಷಿಯಿಂದ ರೈತರು ಹಿಂದೇಟು ಹಾಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳು ರೈತರ ಹಿತ ಮರೆತರೆ ಕ್ಷಮಿಸಲು ಸಾಧ್ಯವಿಲ್ಲ ಎಂದು ಮುಖಂಡರಾದ ಚಂದ್ರಪ್ಪ ಹೇಳಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ದಿನೇಶ್ ಮಾತನಾಡಿ, ಕಳೆದ ಡಿಸೆಂಬರ್‌ನಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿಯೇ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸಲಾಗಿತ್ತು. ಆ ಸಂದರ್ಭ ಶಾಸಕರುಗಳು ಮುಖ್ಯಮಂತ್ರಿಗೆ ಪತ್ರ ನೀಡಿದ್ದನ್ನು ಹೊರತುಪಡಿಸಿ, ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಹೊರಬಂದಿಲ್ಲ. ಈ ಹಿನ್ನೆಲೆ ಮತ್ತೊಮ್ಮೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದರು.

ಮುAದಿನ ಒಂದು ವಾರದ ಒಳಗೆ ಈ ಬಗ್ಗೆ ಕ್ರಮಕೈಗೊಳ್ಳಬೇಕು. ಬಜೆಟ್‌ನಲ್ಲಿಯೇ ರೈತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಘೋಷಣೆ ಮಾಡಬೇಕು. ತಪ್ಪಿದ್ದಲ್ಲಿ ತಾ.೨೧ರಂದು ತಾಲೂಕಿನ ಎಲ್ಲಾ ರೈತರನ್ನು ಒಗ್ಗೂಡಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಧರಣಿಯಲ್ಲಿ ರೈತಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಲಿಂಗೇರಿ ರಾಜೇಶ್, ಕೃಷಿ ಬೋರ್‌ವೆಲ್ ಮಾಲೀಕರ ಸಂಘದ ಅಧ್ಯಕ್ಷ ಗಣಗೂರು ಚಂದ್ರಶೇಖರ್, ರೈತ ಮುಖಂಡರಾದ ಗರಗಂದೂರು ಲಕ್ಷö್ಮಣ್, ಎ.ಆರ್.ಕುಶಾಲಪ್ಪ, ಎಸ್.ಬಿ.ರಾಜಪ್ಪ, ಮಚ್ಚಂಡ ಅಶೋಕ್, ಹಾನಗಲ್ಲು ರಾಜು, ಐ.ಹೆಚ್. ನಿಂಗಪ್ಪ, ಜಯಶಂಕರ್, ಎಐಟಿಯುಸಿ ಜಿಲ್ಲಾಧ್ಯಕ್ಷ ಸೋಮಪ್ಪ ಸೇರಿದಂತೆ ರೈತ ಮುಖಂಡರು ಭಾಗಿಯಾಗಿದ್ದರು.