ಸಿದ್ದಾಪುರ, ಫೆ. 17: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ತಾ. 19 ರಂದು ಚೆನ್ನಯ್ಯನಕೋಟೆ ಗ್ರಾಮದ ಚೆನ್ನಂಗಿ ಬಸವನಹಳ್ಳಿ ಸರಕಾರಿ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಡಾ. ಯೋಗಾನಂದ ತಿಳಿಸಿದ್ದಾರೆ. 19 ರಂದು ಬೆಳಿಗ್ಗೆ 10 ಗಂಟೆಗೆ ಗ್ರಾಮ ವಾಸ್ತವ್ಯದ ಮೂಲಕ ಜಿಲ್ಲಾಧಿಕಾರಿ ಡಾ. ಸತೀಶ್ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಂಬಳೂರು ಗ್ರಾಮದ ಸಮುದಾಯಭವನದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಸಭೆ ತಾ. 19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಬೆಂಬಳೂರು ಹಾಗೂ ಶಿರಹ ಗ್ರಾಮಗಳಿಗೆ ಸಂಬಂಧಿಸಿದ ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಪೌತಿ ಖಾತೆ, ಆಧಾರ್ ಕಾರ್ಡ್ ಅನುಕೂಲತೆ, ಬೆಳೆ ಪರಿಹಾರ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳಿಗೆ ಅರ್ಜಿ ಸ್ವೀಕಾರ, ಸಮಸ್ಯೆ ಇತ್ಯಾದಿಗಳಿಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದು ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ: ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮಗಳ ಕಡೆಗೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಾ. 19 ರಂದು ಕುಶಾಲನಗರ ತಾಲೂಕು ಸುಂಟಿಕೊಪ್ಪ ಹೋಬಳಿಯಲ್ಲಿ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
7ನೇ ಹೊಸಕೋಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ತನಕ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ವಾಸ್ತವ್ಯ ಹೂಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿಲೇವಾರಿ ಮಾಡುವ ಕಾರ್ಯಕ್ರಮ ನಡೆಯಲಿದೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.