ಕರಿಕೆ, ಫೆ. ೧೯: ಜಿಲ್ಲೆಯಲ್ಲಿ ಸರಕಾರದ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯತೆ ಹಾಗೂ ಹೊಂದಾಣಿಕೆಯಿAದ ಕೆಲಸ ಮಾಡಿದ್ದಲ್ಲಿ ಮಾತ್ರ ಜಿಲ್ಲೆಯ ಅಭಿವೃದ್ಧಿ ಸಾಧ್ಯವೆಂದು ರಾಜ್ಯ ಪಶ್ಚಿಮಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಅಭಿಪ್ರಾಯಪಟ್ಟರು.
ಕೊಡಗು ಜಿ.ಪಂ. ಆಡಳಿತ ಭವನದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಲೋಕೋಪಯೋಗಿ, ವಿದ್ಯುತ್, ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಅಭಿವೃದ್ಧಿ, ಜಿ.ಪಂ. ಇಂಜಿನಿಯರಿAಗ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗಳ ನಡುವೆ ಸಮನ್ವಯತೆಯ ಕೊರತೆಯಿಂದಾಗಿ ಪಶ್ಚಿಮಘಟ್ಟಗಳ ವ್ಯಾಪ್ತಿಯ ಹಾಡಿಗಳಲ್ಲಿ ಜನರ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ರಸ್ತೆ, ವಸತಿ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಕಷ್ಟಸಾಧ್ಯವಾಗಿದೆ. ಇದಕ್ಕೆ ಕಾರಣ ಇಲಾಖೆಗಳ ನಡುವೆ ಪರಸ್ಪರ ಹೊಂದಾಣಿಕೆಯ ಕೊರತೆ ಎಂದರು. ಸರಕಾರದಿಂದ ಹಾಡಿಗಳು ಸೇರಿದಂತೆ ಅರಣ್ಯದಂಚಿನ ಗ್ರಾಮಗಳಿಗೆ ಸಾಕಷ್ಟು ಅನುದಾನ ಮಂಜೂರಾಗಿದ್ದರೂ ಕಾನೂನಿನ ತೊಡಕಿನಿಂದ ಅನುದಾನ ಸದ್ಬಳಕೆಯಾಗುತ್ತಿಲ್ಲ.
ಕಾನೂನಿನ ಅಡಿಯಲ್ಲಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲು ಅವಕಾಶವಿದ್ದರೂ ಉಳಿದ ಇಲಾಖೆಯವರು ತಮ್ಮ ಕಾಮಗಾರಿಗಳನ್ನು ಕಾರ್ಯಗತ ಗೊಳಿಸಲು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಅರ್ಜಿ ಸಲ್ಲಿಸದೆ ಇಲಾಖೆಯ ಮೇಲೆ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪ ಹೊರಿಸು ತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.
ಈಗಾಗಲೇ ನಾನು ಅಧಿಕಾರಕ್ಕೆ ಬಂದ ಮೇಲೆ ಅರಣ್ಯದಂಚಿನ ಸಂಪಾಜೆ, ಚೆಂಬು ಭಾಗದ ಹಾಡಿಗಳಿಗೆ ರಸ್ತೆ, ಸೇತುವೆ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಕಾನೂನಿನ ಚೌಕಟ್ಟಿನ ಒಳಗೆ ಅರಣ್ಯ ಇಲಾಖೆ ಅನುಮತಿ ನೀಡಿದ್ದು ಜಿಲ್ಲೆಯ ಉಳಿದ ಭಾಗದಲ್ಲಿ ಕೂಡ ಅನುಮತಿ ಪಡೆದು ಮಾರ್ಚ್ ಅಂತ್ಯದೊಳಗೆ ಕಾಮಗಾರಿಗಳನ್ಮು ಮುಗಿಸಿ ಜಿಲ್ಲೆಯ ಅಭಿವೃದ್ಧಿಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ, ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶೇಖರ್, ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಪ್ ಪೂರ್ಣಿಮಾ, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳಾದ ದಯಾನಂದ್, ಶ್ರೀನಿವಾಸ ನಾಯಕ್, ಮೊಹಿಸಿನ್ ಪಾಷ, ಲೋಕೋಪಯೋಗಿ ಇಲಾಖೆಯ ಅಭಿಯಂತರ ಶಿವರಾಂ, ಜಿ.ಪಂ. ಇಂಜಿನಿಯರಿAಗ್ ವಿಭಾಗದ ಮಹದೇವ್, ಜವರೇಗೌಡ ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಮುಂದಕ್ಕೆ ಇಲಾಖೆಗಳ ನಡುವೆ ಪರಸ್ಪರ ಸಂಪರ್ಕ ಮಾಡಿಕೊಂಡು ಕೆಲಸ ಮಾಡುವುದಾಗಿ ಭರವಸೆ ನೀಡಿದರು.