ಸೋಮವಾರಪೇಟೆ, ಫೆ. ೨೪: ಇಲ್ಲಿನ ಪಟ್ಟಣ ಪಂಚಾಯಿತಿಯನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ ಪ.ಪಂ. ವತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿ ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
‘ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ, ಮನುಕುಲಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಸದಿರಿ, ಬಟ್ಟೆ ಬ್ಯಾಗ್ ಹಿಡಿಯಿರಿ, ಅಂಗಡಿ ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಮಾರದಿರಿ’ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಪಟ್ಟಣದಲ್ಲಿ ಜಾಥಾ ನಡೆಸಲಾಯಿತು.
ಈ ಸಂದರ್ಭ ಮಾತನಾಡಿದ ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು ಅವರು, ಈಗಾಗಲೇ ಸೋಮವಾರಪೇಟೆ ಪಟ್ಟಣ ಪಂಚಾಯಿತಿಯನ್ನು ಪ್ಲಾಸ್ಟಿಕ್ ಮುಕ್ತ ಎಂದು ಘೋಷಿಸಲಾಗಿದ್ದು, ಪ್ಲಾಸ್ಟಿಕ್ ಮಾರಾಟವನ್ನು ನಿಷೇಧಿಸಲಾಗಿದೆ. ಆದಾಗ್ಯೂ ಕೆಲವರು ಪ್ಲಾಸ್ಟಿಕ್ ಬ್ಯಾಗ್‌ಗಳಲ್ಲಿ ದಿನಸಿ, ತರಕಾರಿ ತೆಗೆದುಕೊಂಡು ಹೋಗುತ್ತಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕಲಾಗುವುದು ಎಂದರು.
ಪಟ್ಟಣವನ್ನು ಶುಚಿತ್ವವಾಗಿಡಲು ಎಲ್ಲರೂ ಕೈಜೋಡಿಸಬೇಕು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಪ್ರತಿ ವಾರ್ಡ್ಗಳಿಗೂ ತ್ಯಾಜ್ಯ ಸಂಗ್ರಹದ ವಾಹನ ತೆರಳುತ್ತಿದ್ದು, ಸಾರ್ವಜನಿಕರು ತಮ್ಮ ಮನೆ, ಅಂಗಡಿಯ ತ್ಯಾಜ್ಯವನ್ನು ಬೇರ್ಪಡಿಸಿ ವಾಹನಕ್ಕೆ ನೀಡಬೇಕು. ಹೀಗೆ ಸಂಗ್ರಹವಾದ ತ್ಯಾಜ್ಯವನ್ನು ಪಟ್ಟಣ ಪಂಚಾಯಿತಿಯಿAದ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುವುದು ಎಂದರು. ಜಾಥಾದಲ್ಲಿ ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಸದಸ್ಯರುಗಳಾದ ಬಿ.ಆರ್. ಮಹೇಶ್, ಮೃತ್ಯುಂಜಯ, ಶೀಲಾ ಡಿಸೋಜ, ಶುಭಕರ್ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.