ಮಡಿಕೇರಿ, ಫೆ. ೨೭: ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಂಡು ತಮ್ಮನ್ನು ವಿಜ್ಞಾನದ ಆವಿಷ್ಕಾರಗಳಲ್ಲಿ ತೊಡಗಿಸಿಕೊಂಡು ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಕೈಗೊಳ್ಳಬೇಕು ಎಂದು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಕರೆ ನೀಡಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಜ್ಞಾನ ಸಂಘದ ಸಹಯೋಗದೊಂದಿಗೆ ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿಜ್ಞಾನ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ದೇಶದ ವಿಜ್ಞಾನಿಗಳ ಸಂಶೋಧನೆ ಮತ್ತು ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುವ ಮೂಲಕ ವಿಜ್ಞಾನ ಕಲಿಕೆಯೊಂದಿಗೆ ತಮ್ಮನ್ನು ಹೊಸ ಅನ್ವೇಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ರಾಷ್ಟಿçÃಯ ವಿಜ್ಞಾನ ದಿನದ ಮಹತ್ವ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ವಿಜ್ಞಾನ ಕಾರ್ಯಕ್ರಮಗಳ ಸಂಘಟಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಜನರ ದೈನಂದಿನ ಜೀವನದಲ್ಲಿ ವೈಜ್ಞಾನಿಕ ಅನ್ವಯಿಕೆಗಳ ಮಹತ್ವದ ಬಗ್ಗೆ ಸಂದೇಶವನ್ನು ಹರಡಲು ರಾಷ್ಟಿçÃಯ ವಿಜ್ಞಾನ ದಿನವನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ. ಮಾನವ ಕಲ್ಯಾಣಕ್ಕಾಗಿ ವಿಜ್ಞಾನ ಕ್ಷೇತ್ರದಲ್ಲಿ ಎಲ್ಲಾ ಚಟುವಟಿಕೆಗಳು, ಪ್ರಯತ್ನಗಳು ಮತ್ತು ಸಾಧನೆಗಳನ್ನು ಪ್ರದರ್ಶಿಸುವುದು ಇದರ ಉದ್ದೇಶವಾಗಿದೆ ಎಂದರು.

ನೋಬಲ್ ಪಾರಿತೋಷಕ ಪುರಸ್ಕೃತ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರ ಬೆಳಕಿನ ಚದುರುವಿಕೆ ಕುರಿತ ರಾಮನ್ ಪರಿಣಾಮದ ಸಂಶೋಧನೆ ಹಾಗೂ ರಾಮನ್ ಅವರ ವೈಜ್ಞಾನಿಕ ಕ್ಷೇತ್ರದ ಸಾಧನೆ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿ ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯಿನಿ ಪುದಿಯನೆರವನ ರೇವತಿ ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಜನರಿಗೆ ವಿಜ್ಞಾನ ಮಹತ್ವ ತಿಳಿಸುವುದರೊಂದಿಗೆ ಸಮಾಜದಲ್ಲಿನ ಮೌಢ್ಯ, ಕಂದಾಚಾರಗಳ ವಿರುದ್ಧ ಜನಜಾಗೃತಿ ಮೂಡಿಸಬೇಕು ಎಂದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ನ ಪ್ರಧಾನ ಕಾರ್ಯದರ್ಶಿ ಅಂಬೆಕಲ್ ನವೀನ್ ಮಾತನಾಡಿ, ವಿದ್ಯಾರ್ಥಿಗಳು ಹೆಸರಾಂತ ವಿಜ್ಞಾನಿಗಳ ಸಾಧನೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹೊಂದಬೇಕು ಎಂದರು.

ಶಿಕ್ಷಕರಾದ ಬಿ.ಎಲ್.ಸಂದೇಶ್, ಇಂದ್ರಾಣಿ, ಮಂಜುಳಾ, ಮೋಹನಕುಮಾರಿ, ಕವಿತ ಇದ್ದರು. ಶಿಕ್ಷಕಿ ಪಿ.ಪಿ.ವತ್ಸಲಾ ಸ್ವಾಗತಿಸಿದರು. ಶಿಕ್ಷಕಿ ಜಯಮ್ಮ ವಂದಿಸಿದರು. ಶಿಕ್ಷಕಿ ತೇಜಸ್ವಿನಿ ನಿರ್ವಹಿಸಿದರು. ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರು ವಿಜ್ಞಾನ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಹಾಗೂ ಸಾಧನೆ ಕುರಿತು ವಿದ್ಯಾರ್ಥಿಗಳಾದ ಸಿ.ಎಲ್.ರಕ್ಷಿತ ಮತ್ತು ವಿ.ಚೈತನ್ಯ ಪ್ರಬಂಧ ಮಂಡಿಸಿದರು. ಸ್ಪರ್ಧಾ ವಿಜೇತರಿಗೆ ವಿಜ್ಞಾನ ಪುಸ್ತಕಗಳನ್ನು ಬಹುಮಾನ ರೂಪದಲ್ಲಿ ವಿತರಿಸಲಾಯಿತು.