ಕೊಡ್ಲಿಪೇಟೆ, ಫೆ.೨೮: ಸಹಕಾರ ಸಂಘಗಳು ಭ್ರಷ್ಟಾಚಾರ ಮತ್ತು ರಾಜಕೀಯ ರಹಿತವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸ್ವಾವಲಂಬನೆ ಸಾಧಿಸಬಹುದು. ಈ ನಿಟ್ಟಿನಲ್ಲಿ ಎಲ್ಲಾ ಸಹಕಾರಿ ಸಂಸ್ಥೆಗಳು ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಭಿಪ್ರಾಯಿಸಿದರು.ಕೊಡ್ಲಿಪೇಟೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರಿ ಸಂಘಗಳು ರೈತರ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಸಕಾಲದಲ್ಲಿ ಸಾಲ ವಿತರಣೆ ಮಾಡಬೇಕು. ಇದರೊಂದಿಗೆ ನೀಡಿದ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡುವಂತೆ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ಆಗಬೇಕು ಎಂದು ಸಲಹೆ ನೀಡಿದರು.ರಾಜ್ಯಾದ್ಯಂತ ಬಹುತೇಕ ಸಹಕಾರಿ ಸಂಘಗಳು ಲಾಭದಲ್ಲಿದ್ದರೆ, ಕೆಲವು ಮಾತ್ರ ನಷ್ಟದ ಹಾದಿಯಲ್ಲಿವೆ. ಸಹಕಾರಿಗಳ ಇಚ್ಚಾಶಕ್ತಿ ಹಾಗೂ ಅಧಿಕಾರಿಗಳ ಪ್ರಾಮಾಣಿಕತೆಯಿಂದ ಮಾತ್ರ ಸಹಕಾರ ಕ್ಷೇತ್ರ ಉಳಿಯುತ್ತದೆ. ಈ ನಿಟ್ಟಿನಲ್ಲಿ ಕೊಡಗಿನ ಸಹಕಾರ ಸಂಘಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಶ್ಲಾಘಿಸಿದರು.
ಸಹಕಾರ ಸಂಘಗಳಲ್ಲಿ ಸದಸ್ಯತ್ವದ ಸಂಖ್ಯೆ ಹೆಚ್ಚಬೇಕು. ಸಂಘಗಳು ಸ್ವಂತ ಕಟ್ಟಡವನ್ನು ಹೊಂದುವ ಮೂಲಕ ಅಸ್ತಿತ್ವವನ್ನು ಭದ್ರಪಡಿಸಿಕೊಳ್ಳಬೇಕು. ಸಹಕಾರಿ ಸಂಘಗಳ ಮೂಲಕ ಅನುಷ್ಠಾನಗೊಳ್ಳುವ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸದಸ್ಯರಿಗೆ ಮತ್ತು ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಎಂದು ಸಚಿವರು ತಿಳಿಸಿದರು.
(ಮೊದಲ ಪುಟದಿಂದ) ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ, ಹಿರಿಯ ಸಹಕಾರಿ ಧುರೀಣ ಎಂ.ಸಿ. ನಾಣಯ್ಯ ಮಾತನಾಡಿ, ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಆಡಳಿತ ವರ್ಗವು ರಾಜಕೀಯ ರಹಿತವಾಗಿ, ರೈತರ ಅಭ್ಯುದಯ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲೆಯು ಸಹಕಾರಿ ಸಂಘದ ಸ್ಥಾಪನೆಗೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ಕೊಡ್ಲಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಹಲವಾರು ಕಷ್ಟನಷ್ಟಗಳ ನಡುವೆಯೂ ಸಾಗಿಬಂದು, ಇಂದು ಲಾಭಾಂಶದತ್ತ ಹೆಜ್ಜೆಯಿಟ್ಟಿದೆ. ಮುಂದೆ ಕೂಡ ಬಡ ರೈತರ ಅನುಕೂಲಕ್ಕಾಗಿ ಕಡಿಮೆ ಬಡ್ಡಿ ದರದಲ್ಲಿ ಎಲ್ಲಾ ರೀತಿಯ ಸಾಲ ಸೌಲಭ್ಯವನ್ನು ಮತ್ತು ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದರು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಸಹಕಾರಿ ಸಂಘಗಳ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಪರಸ್ಪರ ಹೊಂದಾಣಿಕೆಯಿAದ ಪಾರದರ್ಶಕವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸಹಕಾರಿ ಕ್ಷೇತ್ರವು ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಂಘದ ಅಭಿವೃದ್ಧಿಯ ಕಡೆ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್.ಡಿ. ತಮ್ಮಯ್ಯ ಮಾತನಾಡಿ, ಶತಮಾನೋತ್ಸವ ಅಂಗವಾಗಿ ಸಂಘದ ಎಲ್ಲಾ ಸದಸ್ಯರಿಗೂ ಬೆಳ್ಳಿ ನಾಣ್ಯ ವಿತರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೆ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯಾಚಾರ್, ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಬಿ.ಕೆ. ಚಿಣ್ಣಪ್ಪ, ಬಿ.ಡಿ. ಮಂಜುನಾಥ್, ಎಸ್.ಬಿ. ಭರತ್ ಕುಮಾರ್, ಸಹಕಾರಿ ಸಂಘಗಳ ಉಪನಿಬಂಧಕರಾದ ಬಿ.ಕೆ.ಸಲೀಂ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಚ್.ಡಿ. ರವಿಕುಮಾರ್, ಮಾಜಿ ಅಧ್ಯಕ್ಷರಾದ ಕಾಳಪ್ಪ, ಪ್ರಮುಖರಾದ ಅಪ್ಪಸ್ವಾಮಿ, ರೇಣುಕಾ ವಸಂತ, ನಿರ್ಮಲ, ಭಾನುಮತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶತಮಾನೋತ್ಸವ ಕಟ್ಟಡ ನಿರ್ಮಾಣಕ್ಕೆ ಸ್ಥಳ ನೀಡಿದ ಮಹಡಿ ಮನೆ ಕುಟುಂಬದ ಸುರೇಶ್, ಸಂಘದ ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಶತಮಾನೋತ್ಸವ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.