ಸೋಮವಾರಪೇಟೆ, ಮಾ. ೩: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಸಾಹಿತಿಗಳು ನೀಡಿರುವ ಕೊಡುಗೆ ಅಪಾರವಾಗಿದೆ. ಹಿರಿಯರೊಂದಿಗೆ ಕಿರಿಯ ಸಾಹಿತಿಗಳೂ ಸಹ ಸಾಹಿತ್ಯದ ಬೆಳವಣಿಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಹಿರಿಯ ಸಾಹಿತಿ ಪ್ರೊ. ಕೃಷ್ಣೇಗೌಡ ಅವರು ಅಭಿಪ್ರಾಯಿಸಿದರು.
ಇಲ್ಲಿನ ಸೃಷ್ಟಿಯ ಚಿಗುರು ಕವಿ ಬಳಗದ ವತಿಯಿಂದ ಆಯೋಜಿಸಿದ್ದ ಆನ್ಲೈನ್ ಕವನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಕವಿಗಳಿಗೆ ಸ್ಥಳೀಯ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿಯೇ ಕೊಡಗು ವಿಶಿಷ್ಟ ಸಂಸ್ಕೃತಿ, ಆಚಾರ ವಿಚಾರಗಳನ್ನು ಹೊಂದಿದ್ದು, ಇದು ಮುಂದಿನ ತಲೆಮಾರಿಗೂ ಉಳಿಯಬೇಕು. ಸಾಹಿತ್ಯ ಕ್ಷೇತ್ರದಲ್ಲಿ ಹಲವಷ್ಟು ಮಂದಿ ತೊಡಗಿಸಿಕೊಂಡಿದ್ದು, ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿಯುತ್ತಿದ್ದಾರೆ. ಯುವ ಸಾಹಿತಿಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆತರೆ ಇನ್ನಷ್ಟು ಸಾಧನೆ ಮಾಡಲು ಸ್ಫೂರ್ತಿ ಯಾಗುತ್ತದೆ ಎಂದರು. ಕನ್ನಡ ಭಾಷೆ, ಸಾಹಿತ್ಯ ಬೆಳೆಯಬೇಕಾದರೆ ಮೊದಲು ಅದನ್ನು ಬಳಸುವ ಕೆಲಸ ಆಗಬೇಕು. ಕನ್ನಡ ಸಂಸ್ಕೃತಿ, ಸಾಹಿತ್ಯ, ಕಲೆ, ಸಂಗೀತ ಕ್ಷೇತ್ರಗಳತ್ತ ಯುವ ಜನತೆ ಒಲವು ಮೂಡಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕವಿ ಬಳಗದ ಅಧ್ಯಕ್ಷ ಕೆ.ಪಿ. ಸುದರ್ಶನ್ ವಹಿಸಿದ್ದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಬಿ. ಸಂಜೀವ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಹಿರಿಯ ಸಾಹಿತಿ ಜಲಾ ಕಾಳಪ್ಪ, ನ.ಲ. ವಿಜಯ, ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೆ.ಎ. ಪ್ರಕಾಶ್, ಕಸಾಪ ಮಾಜಿ ಅಧ್ಯಕ್ಷ ಹೆಚ್.ಜೆ. ಜವರ ಅವರುಗಳು ಉಪಸ್ಥಿತರಿದ್ದರು. ಕವಿ ಬಳಗದ ಸದಸ್ಯರಾದ ಆಶಾ ಪುಟ್ಟರಾಜು ಹಾಗೂ ಪ್ರೇಮಾ ಕಾರ್ಯಕ್ರಮ ನಿರ್ವಹಿಸಿದರು. ಆನ್ಲೈನ್ ಕವಿಗೋಷ್ಠಿಯಲ್ಲಿ ಸ್ಪರ್ಧಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿ ಕೃಷ್ಣೇಗೌಡ ಅವರನ್ನು ಸೃಷ್ಟಿಯ ಚಿಗುರು ಕವಿ ಬಳಗದ ವತಿಯಿಂದ ಸನ್ಮಾನಿಸಲಾಯಿತು.