ಮಡಿಕೇರಿ, ಮಾ. ೫ : ಜಿಲ್ಲಾ ಯುವ ಒಕ್ಕೂಟ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ತಾ. ೭ ರಂದು ನೆರೆ-ಹೊರೆ ಯುವ ಸಂಸತ್ತು ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಹೊದ್ದೂರು ಶ್ರೀ ಪ್ರಸನ್ನ ಗಣಪತಿ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಮಧ್ಯಾಹ್ನ ೧.೩೦ ಗಂಟೆಗೆ ಮೂರ್ನಾಡು ವಿದ್ಯಾ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ. ಸುಕುಮಾರ್ ತಿಳಿಸಿದ್ದಾರೆ.
ಕೊಡಗು-ಮೈಸೂರು ಲೋಕಾಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮೂರ್ನಾಡು ಗ್ರಾ.ಪಂ. ಅಧ್ಯಕ್ಷೆ ಸುಜಾತ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ನೆಹರು ಯುವ ಕೇಂದ್ರದ ರಾಜ್ಯ ನಿರ್ದೇಶಕ ಎಂ.ಎನ್. ನಟರಾಜ್, ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಚೆಟ್ಟೀರ ಜಿ. ಮಾದಪ್ಪ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಹಿರಿಯ ಶಿಕ್ಷಕ ಎಸ್.ಡಿ. ಪ್ರಶಾಂತ್, ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೋ.ಪಟ್ಟಡ ಪೂವಣ್ಣ, ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕ ಪಿ.ಕೆ.ರವಿಶಂಕರ್ ಪಾಲ್ಗೊಳ್ಳಲಿದ್ದಾರೆ.
ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಸಾಮ್ರಾಟ್ ಯುವ ಜನತೆಯ ಮೇಲೆ ಸ್ವಾಮಿ ವಿವೇಕಾನಂದರ ಪ್ರಭಾವ ಹಾಗೂ ಉಪನ್ಯಾಸಕ ಕಿಗ್ಗಾಲು ಜಿ. ಹರೀಶ್ ಆತ್ಮನಿರ್ಭರ ಭಾರತ ಕೌಶಲ್ಯ ಹಾಗೂ ಯುವ ಜನತೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.