ಸಿದ್ದಾಪುರ, ಮಾ. ೮: ಸಂತ್ರಸ್ತರಿಗೆ ಪುನರ್ವಸತಿಗೆ ಗುರುತಿಸಿದ ಜಾಗದಲ್ಲಿ ಪುನರ್ವಸತಿ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ತಾ. ೧೦ ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಸಂತ್ರಸ್ತರು ಗುಡಿಸಲು ನಿರ್ಮಿಸಿ ಚಳುವಳಿ ನಡೆಸಲಿದ್ದಾರೆ ಎಂದು ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಆರ್ ಭರತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ೩ ವರ್ಷಗಳ ಹಿಂದೆ ಕಾವೇರಿ ನದಿಯಲ್ಲಿ ಪ್ರವಾಹ ಏರಿಕೆಯಾಗಿ ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯ ನದಿ ತೀರದಲ್ಲಿ ವಾಸಿಸುವ ನೂರಾರು ಮನೆಗಳು ನೆಲಸಮ ಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಕುಟುಂಬಗಳು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದವು. ನಂತರ ಶಾಶ್ವತ ಸೂರು ಕಲ್ಪಿಸಿಕೊಡುವಂತೆ ನೂರಾರು ಕುಟುಂಬಗಳು ಪರಿಹಾರ ಕೇಂದ್ರದಲ್ಲೇ ಪ್ರತಿಭಟನೆಯನ್ನು ನಡೆಸಿದ್ದವು. ಇದರಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಅರೆಕಾಡು ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಗುರುತಿಸಿ ೮ ಏಕರೆ ಜಾಗವನ್ನು ಒತ್ತುವರಿದಾರರಿಂದ ವಶಪಡಿಸಿಕೊಂಡಿತ್ತು. ಆದರೆ ಈ ಜಾಗದಲ್ಲಿ ಪುನರ್ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶಾಸಕರಾದ ಅಪ್ಪಚ್ಚುರಂಜನ್ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಎರಡು ಬಾರಿ ಟೋಕನ್‌ಗಳನ್ನು ನೀಡುವ ಮೂಲಕ ಸಂತ್ರಸ್ತ ಫಲಾನುಭವಿಗಳನ್ನು ಆಯ್ಕೆಗೊಳಿಸಲಾಗಿತ್ತು. ಆದರೆ ಈವರೆಗೂ ಸಂತ್ರಸ್ತರಿಗೆ ಗುರುತಿಸಿದ ಜಾಗದಲ್ಲಿ ವೈಜ್ಞಾನಿಕವಾಗಿ ಯಾವುದೇ ಕಾಮಗಾರಿಗಳನ್ನು ಮಾಡದೇ ಮೂಲಸೌಲಭ್ಯಗಳನ್ನು ಒದಗಿಸಿಕೊಡದೇ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ನಿರ್ಲಕ್ಯ÷್ಷ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಭರತ್ ಆರೋಪಿಸಿದರು.

ನಿವೇಶನಕ್ಕೆ ಗುರುತಿಸಿದ ಜಾಗದಲ್ಲಿ ಅಂದಾಜು ರೂ ೧೫ ಲಕ್ಷ ವೆಚ್ಚದಲ್ಲಿ ಸೇತುವೆ ಕಾಮಗಾರಿ ಯೊಂದು ನಡೆಯಬೇಕಾಗಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡ ಕುಟುಂಬಗಳು ಇದೀಗ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದಾರೆ. ಅಲ್ಲದೇ ಕೆಲವು ಕುಟುಂಬಗಳು ನದಿ ತೀರದಲ್ಲಿ ಶೆಡ್‌ನಲ್ಲಿ ವಾಸವಾಗಿದ್ದಾರೆ. ಆದರೆ ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾಡಳಿತ ಬಾಡಿಗೆ ಹಣ ನೀಡುತ್ತಿಲ್ಲ ಎಂದು ದೂರಿದರು. ಮುಂದಿನ ೨-೩ ತಿಂಗಳಿನಲ್ಲಿ ಮಳೆಗಾಲ ಆರಂಭವಾಗುತ್ತಿದ್ದು, ಜಿಲ್ಲಾಡಳಿತವು ಪುನರ್ವಸತಿಗೆ ಗುರುತಿಸಿದ ಜಾಗದಲ್ಲಿ ತ್ವರಿತ ಗತಿಯಲ್ಲಿ ಕಾಮಗಾರಿ ಮಾಡಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಬೇಕೆAದರು. ಸಂತ್ರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ತಾ. ೧೦ ರಂದು ಬೆಳಿಗ್ಗೆ ೧೦.೩೦ ಕ್ಕೆ ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಂತ್ರಸ್ತರು ಸೇರಿ ಗುಡಿಸಲು ನಿರ್ಮಿಸಿ ಪ್ರತಿಭಟನೆಯನ್ನು ನಡೆಸಲಾಗುವುದೆಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನೆಲ್ಲಿಹುದಿಕೇರಿಯ ಸಂತ್ರಸ್ತರ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಸೆಫಿಯಾ ಮುಸ್ತಫಾ, ಚಂದ್ರನ್, ಅಬೀಬ್, ಶಿವರಾಂ, ಸುಹದಾ ಹಾಜರಿದ್ದರು.