ಮಡಿಕೇರಿ, ಮಾ. ೯: ವೀರಾಜಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷೆ ಕೆ.ಪಿ. ಕಾವೇರಮ್ಮ ತಿಳಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೧೦ ರಂದು (ಇಂದು) ಗೋಣಿಕೊಪ್ಪ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದ್ದು, ತಾ. ೧೪ರಂದು ಗೋಣಿಕೊಪ್ಪ ಪರಿಮಳ ಮಂಗಳ ವಿಹಾರ ಕಲ್ಯಾಣ ಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಾಧಕರಿಗೆ ಸನ್ಮಾನ ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಕಾವೇರಮ್ಮ ಮಾಹಿತಿಯಿತ್ತರು.
ಗೋಷ್ಠಿಯಲ್ಲಿ ತಾಲೂಕು ಕಾರ್ಯದರ್ಶಿ ಬಿ.ಸಿ. ನಳಿನಾಕ್ಷಿ, ತಾಲೂಕು ಅಧ್ಯಕ್ಷೆ ವಿ.ಎಸ್. ಸುಮಿತ್ರ, ಕ್ಷೇಮನಿಧಿ ಅಧ್ಯಕ್ಷೆ ಬಿ.ಕೆ. ಸರೋಜ, ಖಜಾಂಚಿ ರಾಜೇಶ್ವರಿ ಉಪಸ್ಥಿತರಿದ್ದರು.