*ಗೋಣಿಕೊಪ್ಪ, ಮಾ. ೧೦: ಮಹಿಳಾ ದಿನಾಚರಣೆಯ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಗೋಣಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಸಲಾಯಿತು.

ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಯೋಜನೆ, ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ಕ್ರೀಡಾಕೂಟ ಅಂಗನವಾಡಿ ಕಾರ್ಯಕರ್ತರ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಕ್ರೀಡಾಕೂಟಕ್ಕೆ ಗೋಣಿಕೊಪ್ಪ ವೃತ ನಿರೀಕ್ಷಕ ಜಯರಾಮ್ ಅವರು ಬಕೆಟ್‌ಗೆ ಚೆಂಡು ಹಾಕುವ ಮೂಲಕ ಚಾಲನೆ ನೀಡಿದರು. ನಂತರ ಮಹಿಳೆಯರು ಪಾಸ್ ಇನ್ ದಿ ಬಾಲ್, ವಿಷದ ಚೆಂಡು, ಮ್ಯೂಸಿಕ್ ಚೇರ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ವೃತ್ತ ನಿರೀಕ್ಷಕ ಜಯರಾಮ್ ಅವರು, ದೇಶದಲ್ಲಿ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸಾಧನೆ ಮಾಡುವ ಮೂಲಕ ತಮ್ಮ ಇರುವಿಕೆಯನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ದೇಶವನ್ನು ಸಂವೃದ್ಧಿಯೆಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಆತ್ಮವಿಶ್ವಾಸದೊಂದಿಗೆ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂದರು.

ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಜಿಲ್ಲಾ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷ ಕಾವೇರಮ್ಮ, ತಾಲೂಕು ಅಧ್ಯಕ್ಷೆ ಸುಮಿತ್ರಾ, ದೈಹಿಕ ಶಿಕ್ಷಕಿ ಹರಿಣಿ, ದೈಹಿಕ ಶಿಕ್ಷಕರುಗಳಾದ ರಮಾನಂದ, ಪರಮೇಶ್, ಮಹೇಶ್ ಉಪಸ್ಥಿತರಿ ದ್ದರು. -ಎನ್.ಎನ್. ದಿನೇಶ್